ನವದೆಹಲಿ: ಕೇಂದ್ರೀಯ ತನಿಖಾ ದಳ (CBI) ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ (Praveen Sood) ಇಂದು (ಗುರುವಾರ) ಅಧಿಕಾರ ಸ್ವೀಕರಿಸಿದ್ದಾರೆ.
ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ (Subodh Kumar Jaiswal) ಅಧಿಕಾರವಧಿ ಇಂದಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14 ರಂದು 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ (Narendra Modi), ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಭಾಗವಹಿಸಿದ್ದ ಸಭೆಯಲ್ಲಿ ಸಿಬಿಐ ನಿರ್ದೇಶಕರ ಹುದ್ದೆಗೆ ಪ್ರವೀಣ್ ಸೂದ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಇದನ್ನೂ ಓದಿ: ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ: ಎಂ.ಲಕ್ಷ್ಮಣ್ ಆರೋಪ
ಕರ್ನಾಟಕ ಕೇಡರ್ ನ 1986 ಬ್ಯಾಚ್‍ನ ಐಪಿಎಸ್ (IPS) ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರು 2013-14ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಅಲ್ಲದೆ ರಾಜ್ಯ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್‍ನ ಎಡಿಜಿಪಿ ಆಗಿಯೂ ಕೆಲಸ ಮಾಡಿದ್ದಾರೆ.
2024ರಲ್ಲಿ ಪ್ರವೀಣ್ ಸೂದ್ ಸೇವೆಯಿಂದ ನಿವೃತ್ತಿ ಹೊಂದಬೇಕಿತ್ತು. ಆದರೆ ಸಿಬಿಐ ನೂತನ ನಿರ್ದೇಶಕರಾಗಿ ನೇಮಿಸಿದ ಕಾರಣ ಈಗ ಎರಡು ವರ್ಷಗಳ ಅಧಿಕಾರವಧಿ ವಿಸ್ತರಣೆಗೊಂಡಿದೆ.