ಚೆನ್ನೈ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ್ದಕ್ಕೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ‘ಪ್ರಜಾಪ್ರಭುತ್ವದ ಮೇಲೆ ನಡೆಸಲಾದ ಸ್ಪಷ್ಟ ದಾಳಿ’ ಎಂದು ಕಿಡಿಕಾರಿದ್ದಾರೆ.
ಜಮ್ಮು ಕಾಶ್ಮೀರವನ್ನು ಎರಡು ಭಾಗಗಳನ್ನಾಗಿ ವಿಂಗಡಿಸಿ, ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದ ಸ್ಪಷ್ಟ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದು ಅತ್ಯಂತ ಆಘಾತಕಾರಿ ಹಾಗೂ ನಿರಂಕುಶಾಧಿಕಾರತ್ವ. 370ನೇ ವಿಧಿ ಮತ್ತು 35ಎ ತನ್ನದೇ ಆದ ಮೂಲ ಹೊಂದಿವೆ. ಹೀಗಾಗಿ ಈ ಕುರಿತು ಯಾವುದೇ ಬದಲಾವಣೆ ತರಬೇಕಾದಲ್ಲಿ ಸಮಾಲೋಚನೆ ನಡೆಸಿ ನಂತರ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಕಳೆದ ವರ್ಷ ಮಕ್ಕಳ್ ನಿಧಿ ಮೈಯಂ ಪಕ್ಷ (ಎಂಎನ್‍ಎಂ) ಸ್ಥಾಪಿಸಿದ್ದ ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ.
Advertisement
ಪ್ರತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮತಕ್ಕೆ ಹಾಕುವ ಮುನ್ನ ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕಿತ್ತು. ಈ ಮೂಲಕ ಬಿಲ್ ಕುರಿತು ಪರಿಶೀಲನೆ ನಡೆಸಬೇಕಿತ್ತು. ಆದರೆ, ಬಲವಂತವಾಗಿ ವಿರೋಧ ಪಕ್ಷಗಳ ಬಾಯನ್ನು ಮುಚ್ಚಿಸಿ ಬಿಲ್ ಪಾಸ್ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.
Advertisement
Advertisement
ಕೇಂದ್ರ ಸರ್ಕಾರ ಸೋಮವಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸಂವಿಧಾನಿಕ ಸವಲತ್ತುನ್ನು ಹಿಂಪಡೆದಿದ್ದು, ಈ ಮೂಲಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ರದ್ದುಗೊಳಿಸಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿ, ಆದೇಶ ಹೊರಡಿಸಿದೆ.
Advertisement
ಜಮ್ಮು ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಒಟ್ಟು ಗೂಡಿಸುವುದು ಹಾಗೂ ಭಯೋತ್ಪಾದನೆಯನ್ನು ಎದುರಿಸುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ಸರ್ಕಾರ ನಿನ್ನೆಯಷ್ಟೇ ತಿಳಿಸಿತ್ತು. ಆದರೆ, ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಈ ನಿರ್ಧಾರ ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ಬಹುದೊಡ್ಡ ಪರಿಣಾಮಗಳನ್ನು ಉಂಟು ಮಾಡುತ್ತದೆ. ಅಲ್ಲದೆ, ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರ ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಆಕ್ರೋಶ ವ್ಯಕ್ತಪಡಿಸಿವೆ.
370ನೇ ವಿಧಿಯನ್ನು ರದ್ದುಗೊಳಿಸುವುದಕ್ಕೂ ಮುನ್ನ ಜಮ್ಮು ಕಾಶ್ಮೀರದಲ್ಲಿ ಅಶಾಂತಿ, ಸಾರ್ವಜನಿಕರಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಹೆಚ್ಚು ಸೈನಿಕರನ್ನು ಸ್ಥಳಾಂತರಿಸಿ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗಿತ್ತು. ಇದೇ ಧೈರ್ಯದಿಂದಲೇ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಕುರಿತು ಘೋಷಿಸಿದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆ ನಂತರ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ‘ಭಾರತದ ಸಂಪೂರ್ಣ ಸಂವಿಧಾನ’ ಜಮ್ಮು ಕಾಶ್ಮೀರಕ್ಕೂ ಅನ್ವಯವಾಗಲಿದೆ ಎಂದು ತಿಳಿಸಿದರು.