-ಸಚಿವರಿಂದ ಮಲತಾಯಿ ಧೋರಣೆ: ರೈತರ ಆಕ್ರೋಶ
ಮಂಡ್ಯ: ಬೆಳೆದು ನಿಂತಿರುವ ಕಬ್ಬು ಮತ್ತು ಭತ್ತದ ಬೆಳೆಗಳನ್ನು ಉಳಿಸಿಕೊಳ್ಳಲು ಹೇಮಾವತಿ ನದಿಗೆ ಗೊರೂರು ಜಲಾಶಯದಿಂದ ನೀರು ಹರಿಸಬೇಕು. ಇಲ್ಲದಿದ್ದರೆ ಸಚಿವ ರೇವಣ್ಣ ಅವರ ಮನೆಯ ಮುಂದೆ ಸಾಮೂಹಿಕವಾಗಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಮತ್ತು ಕಸಬಾ ಹೋಬಳಿಯಲ್ಲಿ ರೈತರು ಅಸಹಾಯಕತೆ ಹೊರಹಾಕುತ್ತಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನಲ್ಲಿ ಬೆಳೆದು ನಿಂತಿರುವ ಕಬ್ಬು ಮತ್ತು ಭತ್ತದ ಬೆಳೆಗಳನ್ನು ಉಳಿಸಿಕೊಳ್ಳಲು ಗೊರೂರು ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ಹೇಮಾವತಿ ನದಿಗೆ ಹರಿಸಿ ಎಂದು ರೈತರು ಆಗ್ರಹಿಸಿದ್ದಾರೆ. ಅಲ್ಲದೆ ಮಂದಗೆರೆ ನದಿ ಅಣೆಕಟ್ಟೆಯ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಕನಿಷ್ಠ 10 ದಿನಗಳ ಕಾಲ ನೀರು ಹರಿಸಬೇಕು ಎಂದು ರೈತ ಮುಖಂಡರು ಒತ್ತಾಯ ಮಾಡುತ್ತಿದ್ದಾರೆ. ಹಾಗೆಯೇ ರೈತರ ಸಮಸ್ಯೆಗಳಿಗೆ ಪರಿಹಾರ ನೀಡದೇ ಸಚಿವ ರೇವಣ್ಣ ಅವರು ಕೃಷ್ಣರಾಜಪೇಟೆ ತಾಲೂಕಿನ ರೈತರನ್ನು ಮಲತಾಯಿ ಧೋರಣೆಯಿಂದ ಕಾಣುತ್ತಿದ್ದಾರೆ ಎಂದು ಈ ಭಾಗದ ರೈತರು ಆರೋಪಿಸಿದ್ದಾರೆ.
Advertisement
Advertisement
ಹೊಳೆನರಸೀಪುರ ರೈತರಿಗೆ ಶ್ರೀರಾಮದೇವರ ಅಣೆಕಟ್ಟೆಯ ನಾಲೆಯ ಮೂಲಕ ನೀರು ಹರಿಸಿ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಟ್ಟಿರುವ ಸಚಿವ ರೇವಣ್ಣ, ಕೆ.ಆರ್.ಪೇಟೆ ತಾಲೂಕಿನ ರೈತರು ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ನದಿಗೆ ನೀರು ಹರಿಸಲು ಆದೇಶ ನೀಡದೆ ಕೃಷ್ಣರಾಜಪೇಟೆಯ ರೈತರಿಗೆ ಅನ್ಯಾಯ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಸೋಮವಾರದ ಒಳಗೆ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರು ಹರಿಸದಿದ್ದರೆ ಹೊಳೆನರಸೀಪುರದಲ್ಲಿನ ಸಚಿವ ರೇವಣ್ಣ ಅವರ ಮನೆಯ ಮುಂದೆ ವಿಷಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ಜೊತೆಗೆ ಗೊರೂರು ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮತ್ತು ರೇವಣ್ಣ ಅವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನೀರು ಹರಿಸದಿದ್ದರೆ ಕೃಷ್ಣರಾಜಪೇಟೆ ತಾಲೂಕಿನ ರೈತರು ಪ್ರತಿಭಟನೆ ಹಾದಿ ಹಿಡಿಯುವುದು ಅನಿವಾರ್ಯವಾಗುತ್ತದೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv