ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಸಕ್ಕರೆ ಸಮಸ್ಯೆ ಜಾಸ್ತಿಯಾಗುವ ಲಕ್ಷಣ ಕಾಣಿಸುತ್ತಿದೆ. ಸಕ್ಕರೆ ಕಾರ್ಖಾನೆಗಳ ಸಾಹುಕಾರರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಡೆಸಿದ ಸಂಧಾನ ಸಭೆಯೇನೋ ಸಕ್ಸಸ್ ಆಗಿದೆ. ಸರ್ಕಾರ ಫಿಫ್ಟಿ ಫಿಫ್ಟಿ ಸೂತ್ರಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ಅಸ್ತು ಎಂದಿದ್ದಾರೆ. ಅಂತೂ ಕಬ್ಬು ಬೆಳೆಗಾರರ ಕಣ್ಣೀರು ಒರೆಸಿದಂತಾಯ್ತು ಅಂತಾ ಸಿಎಂ ನಿಟ್ಟುಸಿರು ಬಿಟ್ಟರು. ಆದರೆ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸೂತ್ರಕ್ಕೆ ಒಪ್ಪದ ರೈತರು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಸಂಧಾನ ಸಭೆಯ ನಿರ್ಣಯ:
ನ್ಯಾಯ ಹಾಗೂ ಲಾಭದಾಯಕ ಬೆಲೆಗಿಂತ (ಎಫ್.ಆರ್.ಪಿ) ಹೆಚ್ಚಿನ ಮೊತ್ತ ನೀಡುವ ಪ್ರಸ್ತಾವನೆಗೆ ಮಾಲೀಕರಿಂದ ವಿರೋಧ ವ್ಯಕ್ತವಾಯಿತು. ಬಳಿಕ ಎಫ್.ಆರ್.ಪಿ ದರವನ್ನು ಕೊಡುವುದಕ್ಕೆ ಒಪ್ಪಿಕೊಂಡರು. ಈಗ ಎಫ್.ಆರ್.ಪಿ ದರ 2,750 ರೂ. ಇದೆ. ಉಳಿದಂತೆ ಮಾಲೀಕರಿಂದ 150 ರೂ., ಸರ್ಕಾರದಿಂದ 150 ರೂ. ಸೇರಿ ಒಟ್ಟು 300 ರೂ. ಪ್ರೋತ್ಸಾಹಧನವಾಗಿ ನೀಡಲು ಸಭೆ ನಿರ್ಧಾರ ಕೈಗೊಳ್ಳಲಾಯಿತು. ಈ ಮೂಲಕ ರೈತರು ಪ್ರತಿ ಟನ್ ಕಬ್ಬಿಗೆ 3,050 ರೂ. ಪಡೆಯಲಿದ್ದಾರೆ.
Advertisement
Advertisement
ಹೆಚ್ಚು ಬಾಕಿ ಉಳಿಸಿಕೊಂಡಿರುವ ಬಾಗಲಕೋಟೆ, ವಿಜಯಪುರ ಕಾರ್ಖಾನೆ ಮಾಲೀಕರು ಮುರುಗೇಶ್ ನಿರಾಣಿ, ಆನಂದ್ ನ್ಯಾಮಗೌಡ, ಎಸ್.ಆರ್ ಪಾಟೀಲ ಅವರು ತಕ್ಷಣ ಬಾಕಿ ಬಿಲ್ ಪಾವತಿ ಮಾಡಬೇಕು ಎಂದು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಲೀಕರು, ತಕ್ಷಣ ಪಾವತಿ ಕಷ್ಟ, ಹಂಗಾಮು ಒಳಗೆ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇತ್ತ ಬೆಳಗಾವಿ ಸಕ್ಕರೆ ಕಾರ್ಖಾನೆ ಮಾಲೀಕರು 15 ದಿನ ಗಡುವು ಕೇಳಿದ್ದಾರೆ.
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ರೈತ ಮುಖಂಡರು ಕಬ್ಬಿನ ದರ ಹಾಗೂ ಬಾಕಿ ವಿಚಾರದಲ್ಲಿ ಸ್ಪಷ್ಟತೆ ಇಲ್ಲ. ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ನಿರ್ಧಾರ ಕೈಗೊಳ್ತೇವೆ. ಅಲ್ಲಿವರೆಗೆ ಅಹೋರಾತ್ರಿ ಧರಣಿ ಮುಂದುವರಿಸುತ್ತೇವೆ ಅಂತಾ ಹೇಳಿದ್ದಾರೆ.
Advertisement
ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರನ್ನು ಭೇಟಿಯಾದ ಜೆಡಿಎಸ್ ಮುಖಂಡ ಪ್ರಕಾಶ್ ಸೋನಾವಲಕರ, ರೈತರ ಮನವೊಲಿಕೆಗೆ ವಿಫಲ ಯತ್ನ ನಡೆಸಿದ್ರು. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಡಿಕೆ ಶಿವಕುಮಾರ್, ಸರ್ಕಾರ ರೈತರ ಪರವಿದ್ದು, ರೈತರನ್ನು ಕೈ ಬಿಡುವ ಪ್ರಶ್ನೆಯೆ ಇಲ್ಲ ಅಂದರು.
ಈ ನಡುವೆ ನವೆಂಬರ್ 20ರಂದು ನಡೆದ ಸಭೆಯ ಅನುಸಾರವಾಗಿ ರೈತರ ಬಾಕಿ ಹಣ ಪಾವತಿಸುವಂತೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ ಇಂದು ಬಾಗಲಕೋಟೆ, ಬೆಳಗಾವಿ, ವಿಜಯಪುರದಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ. ಒಟ್ಟಿನಲ್ಲಿ ಸರ್ಕಾರ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ನಡುವಿನ ಕಬ್ಬಿನ ಸಂಘರ್ಷ ಯಾವ ಹಂತಕ್ಕೆ ತಲುಪುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv