ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟಿಸಲು ತುಮಕೂರಿಗೆ ಹೊರಟ್ಟಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನಲ್ಲಿ ನಡೆಯುವ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ವೇಳೆ ಕೇಂದ್ರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಲು ಶಿವಮೊಗ್ಗದಿಂದ ರೈತರು ತುಮಕೂರಿನತ್ತ ತೆರಳಲು ಹೊರಟ್ಟಿದ್ದರು.
ತುಮಕೂರಿನತ್ತ ಹೊರಟ್ಟಿದ್ದ ರೈತರನ್ನು ನಗರದ ರೈಲ್ವೆ ನಿಲ್ದಾಣದಲ್ಲಿ ತಡೆದ ಪೊಲೀಸರು ತುಮಕೂರಿಗೆ ಹೋಗದಂತೆ ತಡೆದು ವಶಕ್ಕೆ ಪಡೆದಿದ್ದಾರೆ. ಪೊಲೀಸರು ರೈತರನ್ನು ವಶಕ್ಕೆ ಪಡೆಯುತ್ತಿದ್ದಂತೆ ರೈತರು ಪ್ರಧಾನಿ ಮೋದಿ ಹಾಗು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಿಸಾನ್ ಸಮ್ಮಾನ್ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿಗೆ ಬಂದಿಳಿಯುವ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣ ಬೆಳಸಲಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಅಲ್ಲದೆ ಪ್ರಧಾನಿ ಭೇಟಿ ಕೊಟ್ಟ ಸ್ಮರಣಾರ್ಥವಾಗಿ ಗದ್ದುಗೆ ಪಕ್ಕದಲ್ಲಿ ಬಿಲ್ವ ಪತ್ರೆ ಗಿಡ ನೆಡಲಿದ್ದಾರೆ. ನಂತರ ಶಿವಕುಮಾರ ಶ್ರೀಗಳ ವಸ್ತು ಸಂಗ್ರಹಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಗುರುವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗುವ ಪ್ರಧಾನಿಗಳು ರಾಜಭವನದಲ್ಲಿ ಉಳಿದುಕೊಳ್ಳಲಿದ್ದಾರೆ. ಶುಕ್ರವಾರ ಜೆಕೆವಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.