ಶಿವಮೊಗ್ಗ: ಕಲುಷಿತ ನೀರು ಸೇವಿಸಿ ವಾಂತಿ- ಬೇಧಿಯಿಂದಾಗಿ ಅಪ್ಪ-ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲಿನಲ್ಲಿ ನಡೆದಿದೆ.
ಗ್ರಾಮದ ಶಿವಪ್ಪ ಮತ್ತು ಮಗ ಹನುಮಂತ ಮೃತ ದುರ್ದೈವಿಗಳು. ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಶಿವಪ್ಪ ಮನೆಯ ಸಿದ್ದಮ್ಮ, ಶೋಭಾ ಎಂಬವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮ ಪಂಚಾಯತಿ ಪೂರೈಕೆ ಮಾಡಿದ್ದ ನೀರು ಕುಡಿದು ಕಳೆದ ಎರಡು ದಿನಗಳಿಂದ ಗ್ರಾಮದಲ್ಲಿ 45 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಇದೇ ಗ್ರಾಮದಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದರು. ತೀವ್ರವಾಗಿ ಅಸ್ವಸ್ಥಗೊಂಡವರು ಶಿವಮೊಗ್ಗದ ಮೆಗ್ಗಾನ್ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಾಡಳಿತ ಕಾಯಿಸಿದ ನೀರನ್ನು ಕುಡಿಯುವಂತೆ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಡಂಗೂರ ಹೊಡೆಸಿದೆ.
ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹನುಮಂತಪ್ಪ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ನೀರಿನ ಸ್ಯಾಂಪಲ್‍ಗಳನ್ನು ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ನೀರಿನ ಟ್ಯಾಂಕ್ ಸ್ವಚ್ಛಮಾಡದೇ ಇದ್ದುದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.