ಹಾವೇರಿ: ಕೊಡಲಿಯಿಂದ ಹೊಡೆದು ತಂದೆ ಮತ್ತು ಮಗನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಗುಡ್ಡದಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದವರನ್ನ ಮಾಹಾಂತೇಶ ಕುರುಬರ(40) ಮತ್ತು ಮಗ ಚಂದ್ರು ಕುರುಬರ(16) ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರಕ್ಕಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಭಾನುವಾರವೂ ಜಗಳ ನಡೆದಿದ್ದು, ಗಲಾಟೆ ತಾರಕಕ್ಕೇರಿ ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.
ಜಗಳವನ್ನ ಬಿಡಿಸಲು ಬಂದ ಮಹಾಂತೇಶ ಪತ್ನಿ ಮಂಜವ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗ್ರಾಮಸ್ಥರು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಜವ್ವಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಹಾವೇರಿ ಎಸ್‍ಪಿ ಕೆ.ಪರಶುರಾಮ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಅಷ್ಟೇ ಅಲ್ಲದೇ ಆಡೂರು ಠಾಣೆಯ ಪೊಲೀಸರು ಗುಡ್ಡದಮುತ್ತಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಕೊಲೆ ಮಾಡಿದ ಆರೋಪಿಯ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv