ಚಿಕ್ಕಬಳ್ಳಾಪುರ: ಮಗಳನ್ನು ನೋಡಿಕೊಂಡು ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ತಂದೆ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಬಂಡಹಳ್ಳಿ ಗೇಟ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44ರ ನಂದಿ ಮೆಡಿಕಲ್ ಕಾಲೇಜು ಮುಂಭಾಗ ಅಪಘಾತ ಸಂಭವಿಸಿದೆ. ಸೋಮೇನಹಳ್ಳಿ ಗ್ರಾಮದಲ್ಲಿರುವ ಮಗಳನ್ನು ನೋಡಿಕೊಂಡು ಬಂಡಹಳ್ಳಿ ಗ್ರಾಮಕ್ಕೆ ವಾಪಸಾಗುತ್ತಿದ್ದ ವ್ಯಕ್ತಿ, ನಂದಿ ಮೆಡಿಕಲ್ ಕಾಲೇಜು ಬಳಿ ಬಸ್ನಿಂದ ಇಳಿದು ಹೆದ್ದಾರಿ ದಾಟುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
