ಬೆಂಗಳೂರು: ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡು ಬಿಜೆಪಿ ನಾಯಕರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(CM DK Shivakaumar) ಮೇಲೆ ದಾಖಲಾಗಿದ್ದ ಎಫ್‌ಐಆರ್ (FIR) ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ರದ್ದತಿ ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡಿಕೆಶಿ ಪರ ವಕೀಲ ಹೆಚ್.ವಿ ಪ್ರವೀಣ್ ಗೌಡ ಅವರು ವಾದ ಮಂಡಿಸಿ, ಶಿವಕುಮಾರ್ ಅವರ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಾಕಲಾಗಿದೆ ಎಂಬ ಏಕೈಕ ಕಾರಣಕ್ಕೆ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 153(A), 504, 505(2), 464ರ ಅಡಿ ಪ್ರಕರಣ ದಾಖಲಿಸಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರು ಪೋಸ್ಟ್ ಅಪ್‌ಲೋಡ್ ಮಾಡಿದ್ದಾರೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರು ಎಂಬ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಅಂತಾ ವಾದ ಮಂಡಿಸಿದರು. ಇದನ್ನೂ ಓದಿ: ಕರಾವಳಿ & ಮಲೆನಾಡು ಪ್ರವಾಸೋದ್ಯಮ ಬ್ರಾಂಡ್ ಅಂಬಾಸಿಡರ್ ಆಗಿ ರಿಷಬ್ ಶೆಟ್ಟಿ ನೇಮಕ
ಮೂರು ದಶಕಗಳ ಹಿಂದೆ ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀಕಾಂತ್ ಪೂಜಾರಿಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿಯು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಆ ಸಂದರ್ಭದಲ್ಲಿ ಬಿಜೆಪಿ ನಾಯಕರು “ನಾನು ಕರಸೇವಕ ನನ್ನನ್ನೂ ಬಂಧಿಸಿ” ಎಂಬ ಹೊಂದಿದ್ದ ಭಿತ್ತಿಪತ್ರ ಹಿಡಿದು ಅಭಿಯಾನ ನಡೆಸಿದ್ದರು. ಇದನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಫೋಟೊ ಬಳಸಿ “ನಾನು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40,000 ಕೋಟಿ ರೂ. ಅಕ್ರಮದಲ್ಲೂ ಪಾಲುದಾರ ನನ್ನನ್ನು ಬಂಧಿಸಿ. ಶಾಸಕ ವಿ.ಸುನೀಲ್ ಕುಮಾರ್ ಫೋಟೊ ಬಳಸಿ “ನಾನು ಪರಶುರಾಮ ಮೂರ್ತಿ ಕಂಚನ್ನು ಕದ್ದಿದ್ದೇನೆ, ಸಿಮೆಂಟ್ ಕದ್ದಿದ್ದೇನೆ ನನ್ನನ್ನು ಬಂಧಿಸಿ” ಎಂದು ಬರೆದಿರುವ ಚಿತ್ರಗಳನ್ನು ಕೆಪಿಸಿಸಿ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು.
ಇದೇ ಕಾರಣಕ್ಕೆ ಅಂದಿನ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ .ಆರ್ ನಾಯ್ಡು ವಿರುದ್ಧ ಬಿಜೆಪಿಯ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಘಟ್ಟ ನೀಡಿದ್ದ ಖಾಸಗಿ ದೂರು ಆಧರಿಸಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಿಂದ ಎಫ್‌ಐಆರ್ ರದ್ದುಗೊಳಿಸಿ ಆದೇಶಿಸಲಾಗಿದೆ.ಇದನ್ನೂ ಓದಿ: ಬಿಡದಿ ಟೌನ್‌ಶಿಪ್‌ಗೆ ಜಾಗ ಕೊಟ್ಟ ರೈತರಿಗೆ ಚೆಕ್ ವಿತರಿಸಿದ ಸರ್ಕಾರ
