ಮಂಡ್ಯ: ಖಾಸಗಿ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ (Garment Factory) ಬೆಳಗಿನ ಜಾವ ಆಕಸ್ಮಿಕವಾಗಿ (Fire Accident) ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ಈ ಗಾರ್ಮೆಂಟ್ಸ್ ಅನ್ನು ಸೋಮನಹಳ್ಳಿಯಿಂದ ಮದ್ದೂರು ನಗರಕ್ಕೆ ಸ್ಥಳಾಂತರಿಸಲಾಗಿತ್ತು. ಇಲ್ಲಿ ಸುಮಾರು 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆ ಹಾಜರಾದಾಗ ಫ್ಯಾಕ್ಟರಿಯೊಳಗೆ ಬೆಂಕಿ ಹೊತ್ತಿ ಉರಿಯುತ್ತಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಮೂರುಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದನ್ನೂ ಓದಿ: ಕೊಡಗು | ಎರಡು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರುಮಯ; ಶಾಲಾ ಬಸ್ ಸಿಲುಕಿ ವಿದ್ಯಾರ್ಥಿಗಳ ಪರದಾಟ
ಆದರೆ ಅಷ್ಟರಲ್ಲಾಗಲೇ ಗಾರ್ಮೆಂಟ್ಸ್‌ನಲ್ಲಿದ್ದ ಕಚ್ಚಾ ಸಾಮಗ್ರಿಗಳು, ಬಟ್ಟೆಗಳು ಹಾಗೂ ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಿಂದ ಫ್ಯಾಕ್ಟರಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮದ್ದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅರೆಸ್ಟ್

