ದಾವಣಗೆರೆ: ರಸ್ತೆ ಬದಿ ನಿಂತಿದ್ದ ಅಕ್ಕಿ ಸಾಗಿಸುತ್ತಿದ್ದ ಲಾರಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ದಾವಣಗೆರೆ ತಾಲೂಕು ಹೆಬ್ಬಾಳದ ರಾ.ಹೆ-4ರ ಬಳಿ ನಡೆದಿದೆ.
ಮಧ್ಯರಾತ್ರಿ ಲಾರಿಯನ್ನು ಚಾಲಕ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿ ಊಟಕ್ಕೆ ತೆರಳಿದ್ದಾರೆ. ಈ ವೇಳೆ ಲಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಧಗ ಧಗನೇ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಅಕ್ಕಿ ಸಮೇತ ಲಾರಿ ಸಂಪೂರ್ಣ ಭಸ್ಮವಾಗಿದೆ.
ಬೆಂಕಿ ಕಾಣಿಸುತ್ತಿದ್ದಂತೆ ದಾವಣಗೆರೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಅಲ್ಲದೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ದಾವಣಗೆರೆ ಹೈವೇ ಪೆಟ್ರೋಲ್ ಹಾಗೂ ದಾವಣಗೆರೆ ಗ್ರಾಮಾಂತರ ಠಾಣೆಯ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.