– ಕಾರವಾರ ಮೀನು ಮಾರ್ಕೆಟ್ ಪೂರ್ಣ ಬಂದ್
ಕಾರವಾರ: ಬಂದರು ವಿಸ್ತರಣೆ ವಿರೋಧಿಸಿ ಕಾರವಾರದಲ್ಲಿ ಇಂದು ಕೂಡ ಪ್ರತಿಭಟನೆಯನ್ನು ಮುಂದುವರಿಸಿದರು.
ಕಾರವಾರದ ಮೀನು ಮಾರುಕಟ್ಟೆಯನ್ನು ಬಂದ್ ಮಾಡಿದ ಮೀನುಗಾರರು ಮೀನು ಮಾರುಕಟ್ಟೆ ಬಳಿ ಸೇರಿ ಪ್ರತಿಭಟನೆ ಮಾಡಿದರು. ಈ ವೇಳೆ ಉದ್ರಿಕ್ತ ಮೀನುಗಾರ ಮಹಿಳೆಯರಿಂದ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ್ ಮತ್ತು ಸಂಸದ ಅನಂತ್‍ಕುಮಾರ್ ಹೆಗ್ಡೆ ಭಾವಚಿತ್ರಕ್ಕೆ ಸಗಣಿಮೆತ್ತಿ, ಚಪ್ಪಲಿ ಹಾರ ಹಾಕಿ, ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ರಾಜ್ಯದಲ್ಲೇ ಮೊದಲ ಬೃಹತ್ ವಾಣಿಜ್ಯ ಬಂದರಾಗಿ ರೂಪಗೊಳ್ಳಲಿದೆ ಕಾರವಾರ ಬಂದರು
ಕಳೆದ ಎರಡು ದಿನದಿಂದ ಕಾರವಾರ ವಾಣಿಜ್ಯ ಬಂದರು ಎರಡನೇ ಹಂತದ ಕಾಮಗಾರಿ ಯೋಜನೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದ್ದು, ಸೋಮವಾರ 200ಕ್ಕೂ ಹೆಚ್ಚು ಮೀನುಗಾರರನ್ನು ಬಂಧಿಸಿ ಬಿಡುಗಡೆ ಮಾಡಲಾಗಿತ್ತು. ಬಂದರು ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಇದನ್ನು ನಿಲ್ಲಿಸಲು ನಿರಂತರ ಪ್ರತಿಭಟನೆ ಕೈಗೊಂಡಿರುವ ಮೀನುಗಾರರು ಇದೇ ತಿಂಗಳ 16ರಂದು ಕಾರವಾರ ಬಂದ್‍ಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಕಾರವಾರದಲ್ಲಿ ದಿಢೀರ್ ಬಂದ್- ನೂರಕ್ಕೂ ಹೆಚ್ಚು ಮೀನುಗಾರರ ಬಂಧನ
ಎರಡನೇ ಹಂತದ ಬಂದರು ವಿಸ್ತರಣೆಯಿಂದಾಗಿ ಕಾರವಾರದ ಕಡಲತೀರ ನಶಿಸಿ ಹೋಗುತ್ತದೆ. ಮೀನುಗಾರರು ತಮ್ಮ ಬಂದರನ್ನು ಕಳೆದುಕೊಳ್ಳುವ ಜೊತೆ ಸಾವಿರಾರು ಜನ ನಿರುದ್ಯೋಗಿಗಳಾಗ ಬೇಕಾಗುತ್ತದೆ. ಬಂದರು ವಿಸ್ತರಣೆಯಿಂದ ಕಡಲ ಕೊರೆತ ಹೆಚ್ಚಾಗುವ ಜೊತೆ ಮೀನುಗಳ ಜೀವನ ಚಕ್ರ ಸಹ ಬದಲಾಗಿ ತೊಂದರೆ ಅನುಭವಿಸಬೇಕಿದ್ದು ಪರಿಸರಕ್ಕೆ ಹಾನಿಯಾಗಲಿದೆ. ಈ ಕಾರಣದಿಂದ ತಕ್ಷಣ ವಿಸ್ತರಣೆ ಕಾಮಗಾರಿ ಕೈಬಿಡಬೇಕು ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಮೀನುಗಾರರು ನೀಡಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು ಕಾಮಗಾರಿ ನಡೆಸಲಾಗುತ್ತಿದೆ.
ಏನಿದು ಸಾಗರ ಮಾಲ ? ಯೋಜನೆ ರೂಪರೇಷೆ ಏನು?
ಸಾಗರ ಮಾಲಾ ಯೋಜನೆಯು ಬಂದರು ವಿಸ್ತರಣೆಯಾಗಿದ್ದು, ವಾಣಿಜ್ಯ ಬಂದರನ್ನು ರಾಷ್ಟ್ರ ಮಟ್ಟದಲ್ಲಿ ಮೇಲ್ದರ್ಜೆಗೆ ಏರಿಸುವ ಯೋಜನೆಯಾಗಿದೆ. ಸದ್ಯ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆಗಾಗಿ ಕೇಂದ್ರ ಸರ್ಕಾರ ಸಾಗರ ಮಾಲಾ ಯೋಜನೆಯಡಿ ಹಣ ಬಿಡುಗಡೆ ಮಾಡಿದೆ. ಸಾಗರ ಮಾಲಾ ಮೂಲಕ ರಾಜ್ಯದ ಅತಿದೊಡ್ಡ ಸರ್ವಋತು ವಾಣಿಜ್ಯ ಬಂದರನ್ನಾಗಿ ರೂಪಿಸುವ ಯೋಜನೆ ಇದಾಗಿದೆ.
ಬಂದರಿನ ಬೈತಖೋಲ್ ಭಾಗದಿಂದ ಇರುವ 250 ಮೀಟರ್ ಜಟ್ಟಿಯನ್ನು ಇನ್ನೂ 145 ಮೀಟರ್ ವಿಸ್ತರಿಸುವ ಯೋಜನೆಗೆ ಸಾಗರ ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ವಾಣಿಜ್ಯ ಬಂದರಿನಲ್ಲಿ ಹಡಗು ನಿಲ್ಲುವ 512 ಮೀಟರ್ ಉದ್ದದ ಜಟ್ಟಿ ಇದೆ. ಹಂತ ಹಂತವಾಗಿ ಬಂದರನ್ನು ವಿಸ್ತರಿಸುವ ಯೋಜನೆ ಇದಾಗಿದ್ದು, 250 ಕೋಟಿ ರೂ.ನಿಂದ 511 ಕೋಟಿ ರೂ. ತನಕ ಯೋಜನೆಯ ಒಟ್ಟು ವೆಚ್ಚ ಏರಲಿದೆ ಎನ್ನಲಾಗುತ್ತಿದೆ.