– ಡಿಸಿಎಂ ಕಾರಜೋಳ, ಅಧಿಕಾರಿಗಳಿಂದಲೂ ನಿರ್ಲಕ್ಷ್ಯ
ಬಾಗಲಕೋಟೆ: ಸರ್ಕಾರ ನೆರೆ ಪ್ರವಾಹದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 48 ಗಂಟೆಯಲ್ಲಿ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳುತ್ತಾರೆ. ಆದರೆ ಓರ್ವ ವ್ಯಕ್ತಿ ಪ್ರವಾಹದಲ್ಲಿ ಕೊಚ್ಚಿ ಹೋಗಿ ಮೂರು ದಿನಗಳಾದರೂ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಿರಲಿ, ಸೌಜನ್ಯಕ್ಕೂ ಜನಪ್ರತಿನಿಧಿಗಳು, ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿಲ್ಲ.
Advertisement
ಜಿಲ್ಲೆಯ ಬಾದಾಮಿ ತಾಲೂಕಿನ ಶಿರಬಡಗಿ ಗ್ರಾಮದ ರೈತ ರಾಮಪ್ಪ ಹೊನ್ನಣ್ಣವರ(50) ಕಳೆದ 22 ರಂದು ಮಲಪ್ರಭಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದರು. ಆದರೆ ಪ್ರವಾಹಕ್ಕೆ ಬಲಿಯಾದ ರೈತನ ಕುಟುಂಬದ ಕಡೆಗೆ ವಿರೋಧ ಪಕ್ಷದ ನಾಯಕರೂ ಆಗಿರುವ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಸೇರಿದಂತೆ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಹ ಭೇಟಿ ನೀಡಿಲ್ಲ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
Advertisement
ರೈತ ಮೃತಪಟ್ಟ ದಿನವೇ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದರು. ಆದರೆ ಪ್ರವಾಸದ ವೇಳೆ ಶಿರಬಡಗಿ ರೈತನ ಬಗ್ಗೆ ಸಿದ್ದರಾಮಯ್ಯ ಗಮನ ಕೊಡದೇ ಇರುವುದು ಇದೀಗ ಟೀಕೆಗೆ ಗುರಿಯಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಗೋವಿಂದ ಕಾರಜೋಳ ಹಾಗೂ ಅಧಿಕಾರಿಗಳು ಸಹ ಮೃತ ರೈತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿಲ್ಲ. ರೈತನ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಧಿಕಾರಿಗಳು ಕುಟುಂಬಸ್ಥರಿಗೆ ಇಲ್ಲಿಯವರೆಗೆ ಯಾವುದೇ ಭರವಸೆ ನೀಡದ ಕಾರಣ ಯಾರೂ ನಮ್ಮ ಗೋಳು ಕೇಳುತ್ತಿಲ್ಲ ಎಂದು ಮೃತ ರೈತನ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ.