ಬಳ್ಳಾರಿ: ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರದ ನೆರವಿನ ವಿಚಾರದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಗಣಿ ಸಚಿವ ಸಿ.ಸಿ.ಪಾಟೀಲ್ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.
ಬಳ್ಳಾರಿಯಲ್ಲಿ ಈ ಕುರಿತು ಮಾಧ್ಯಮದವರು ಪ್ರಶ್ನಿಸಿದ್ದಾರೆ. ಇದಕ್ಕೆ ಕೆಂಡಾಮಂಡಲವಾಗಿರುವ ಅವರು, ನಾವು ಪರಿಹಾರ ಹಂಚಿಕೆ ಮಾಡುತ್ತಿದ್ದೇವೆ. ಪ್ರವಾಹ ಪೀಡಿತರಿಗೆ ನಮ್ಮ ಸರ್ಕಾರದಿಂದ ಶೀಘ್ರದಲ್ಲೇ ಎಲ್ಲ ಪರಿಹಾರವನ್ನು ಹಂಚಿಕೆ ಮಾಡಲಾಗುವುದು. ಕೇಂದ್ರ ಸರ್ಕಾರದ ನೆರವು ಅಗತ್ಯವಿದೆ. ಆದರೆ ಸದ್ಯಕ್ಕೆ ನಮ್ಮ ಬಳಿ ಇರುವ ಹಣ ವಿತರಣೆ ಮಾಡುತ್ತಿದ್ದೇವೆ ಎಂದರು.
ಈ ವೇಳೆ ಸಂಸದ ತೇಜಸ್ವಿ ಸೂರ್ಯ ಕೇಂದ್ರದ ನೆರವಿನ ಅಗತ್ಯವಿಲ್ಲ ಎನ್ನುತ್ತಿದ್ದಾರೆ ಎಂದು ಕೇಳಿದ್ದಕ್ಕೆ, ಮಾಧ್ಯಮಗಳಿಗೆ ಕೈಮುಗಿದು, ಲೋಗೋ ತಳ್ಳಿ ಹೊರ ಹೋದರು. ನಂತರ ಮರಳಿ ಹೇಳಿಕೆ ನೀಡಿದ ಸಚಿವ ಸಿಸಿ ಪಾಟೀಲ್, ಪ್ರವಾಹ ಪೀಡಿತ ಸಂತ್ರಸ್ತರು ಯಡಿಯೂರಪ್ಪ ಸರ್ಕಾರ ಇಲ್ಲದಿದ್ದರೆ ನಮ್ಮ ಬಾಳು ನಾಯಿ ಪಾಡು ಆಗುತಿತ್ತು ಎಂದು ಹೊಗಳುತ್ತಿದ್ದಾರೆ. ನಮ್ಮ ಸರ್ಕಾರ ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.
ಮರಳು ಗಣಿಗಾರಿಕೆ ಇರಬೇಕು. ಅಕ್ರಮ ಮರಳು ಗಣಿಗಾರಿಕೆ ಇರಬಾರದು. ಮರಳು ಜನ ಸಾಮಾನ್ಯರಿಗೆ ಸಿಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸುವಂತೆ ಸೂಚಿಸಿದ್ದೇನೆ. ಎನ್ ಎಂಡಿಸಿಗೆ ಗಣಿ ಹಂಚಿಕೆ ಬಗ್ಗೆ ಶೀಘ್ರದಲ್ಲೇ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಸಿಸಿ ಪಾಟೀಲ್ ತಿಳಿಸಿದರು.