ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಜೈಲು ಪಾಲಾಗಿದ್ದಾರೆ.
ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಸೇರಿ 15 ಮಂದಿ ದೋಷಿಗಳು ಎಂದು ತೀರ್ಪು ನೀಡಿದ್ದು, 7 ಮಂದಿಯನ್ನು ಆರೋಪ ಮುಕ್ತಗೊಳಿಸಿದೆ. ಶಿಕ್ಷೆಯ ಪ್ರಮಾಣವನ್ನು ಜನವರಿ 3 ರಂದು ಕೋರ್ಟ್ ಪ್ರಕಟಿಸಲಿದೆ.
ಈ ಹಿಂದೆ ಲಾಲು ವಿರುದ್ಧದ ಆರೋಪಗಳನ್ನು ಜಾರ್ಖಂಡ್ ಹೈಕೋರ್ಟ್ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಲಾಲು ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿತ್ತು
ಲಾಲು ಪ್ರಸಾದ್ ಯಾದವ್ ಸೇರಿದಂತೆ ಎಲ್ಲಾ ಆರೋಪಿಗಳು ಪ್ರತ್ಯೇಕ ವಿಚಾರಣೆ ಎದುರಿಸಬೇಕು ಅಷ್ಟೇ ಅಲ್ಲದೇ ಹಾಗೂ 9 ತಿಂಗಳೊಳಗೆ ಪ್ರಕರಣದ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ 2017ರ ಮೇ ತಿಂಗಳಿನಲ್ಲಿ ಆದೇಶ ಪ್ರಕಟಿಸಿತ್ತು
ಏನಿದು ಪ್ರಕರಣ?
20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. ಛಾಯ್ ಬಾಸಾ ಖಜಾನೆಯಿಂದ 37 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಆರೋಪವನ್ನು ಲಾಲು ಎದುರಿಸುತ್ತಿದ್ದಾರೆ. 2013ರ ಸೆಪ್ಟೆಂಬರ್ 3ರಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ನೀಡಿ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಎರಡೂವರೆ ತಿಂಗಳ ಕಾಲ ಬಿರ್ಸಾ ಮುಂಡಾ ಜೈಲಿನಲಿದ್ದ ಲಾಲೂ ಬಳಿಕ ಸುಪ್ರೀಂ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.