ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ(79) ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ (Vasanth Bangera) ಇಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೆಳ್ತಂಗಡಿಯಲ್ಲಿ (Belthangady) ಐದು ಬಾರಿಯ ಶಾಸಕರಾಗಿದ್ದ ಕೆ.ವಸಂತ ಬಂಗೇರ ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಬಂಗೇರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ನಡೆಯುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ.
ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು… pic.twitter.com/ZQl5oCtURk
— Siddaramaiah (@siddaramaiah) May 8, 2024
ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸಲಿದ್ದು ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ಬಂಗೇರ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ (BJP) ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾದರೆ ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತ ಬಂಗೇರ ಸೋಲು ಕಂಡಿದ್ದರು.
1994ರಲ್ಲಿ ಜನತಾದಳದ (JDS) ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿದರು. 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಇವರನ್ನು ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ (Congress) ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
ಸಿದ್ದರಾಮಯ್ಯ ಸಂತಾಪ: ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ. ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.