ಅಮಿತ್‌ ಶಾ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಮಾಜಿ ಸಿಎಂ ಹೆಚ್‌ಡಿಕೆ

Public TV
2 Min Read
AMITSHAH HD KUMARASWAMY

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು (HD Kumaraswamy) ಮಹತ್ವದ ಮಾತುಕತೆ ನಡೆಸಿದರು.

ಇಂದು ಸಂಜೆ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹೆಚ್‌ಡಿಕೆ ಕರ್ನಾಟಕದ ಪ್ರತಿಯೊಂದು ವಿದ್ಯಮಾನವನ್ನು ಅವರ ಗಮನಕ್ಕೆ ತಂದರು.

ಆಗ ಅಮಿತ್‌ ಶಾ ಅವರು, ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ (NDA) ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರ ಜೊತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಹೆಚ್‌ಡಿಕೆಗೆ ಹೇಳಿದ್ದಾರೆ. ಇದನ್ನೂ ಓದಿ: ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿಯನ್ನು ಅಭಿನಂದಿಸಿದ ಸಿಎಂ

ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಅವರು ಕುಮಾರಸ್ವಾಮಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬುವುದಕ್ಕೆ ಮೊದಲೇ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಜನರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ಇಬ್ಬರೂ ನಾಯಕರು ಚರ್ಚೆ ನಡೆಸಿದರು.

ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಹೆಚ್‌ಡಿಕೆ, ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮುಕ್ಕಾಲು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಅಮಿತ್‌ ಶಾ ಬೇಟಿ ವೇಳೆ ಮಾಜಿ ಮುಖ್ಯಮಂತ್ರಿಗಳ ಜೊತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇದ್ದರು.

Share This Article