Bengaluru CityDistrictsKarnatakaLatestLeading NewsMain Post

ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

ಬೆಂಗಳೂರು: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಘಟನೆ ಕುರಿತಂತೆ ಟ್ವೀಟ್ ಮೂಲಕ ಮಾಡಿರುವ ಕುಮಾರಸ್ವಾಮಿ ಅವರು, ಪುಂಡರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆಯಾದ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ ಎಂದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಸೆಂಚುರಿ – 101 ಮಂದಿಗೆ ಸೋಂಕು

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯವನ್ನು ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರ ಇರುವಂತಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರ್ಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ – ಸುತ್ತಮುತ್ತ ಪೊಲೀಸ್ ಭದ್ರತೆ

ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು. ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Back to top button