ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (H.D.Deve Gowda) ಪತ್ನಿ ಚೆನ್ನಮ್ಮ (Chennamma) ನಿಧನಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನು. ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು. ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರ ತಮ್ಮನ ಮಗನಿಂದಲೇ ಆ್ಯಸಿಡ್ ದಾಳಿ; 2 ಬಾರಿ ಸಾವು ಗೆದ್ದು ಬಂದಿದ್ದ ಚೆನ್ನಮ್ಮ
ಮಾಜಿ ಪ್ರಧಾನಿ ಶ್ರೀ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರ ತಾಯಿ ಶ್ರೀಮತಿ ಚೆನ್ನಮ್ಮನವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ಗೌಡರ ಸುದೀರ್ಘ ರಾಜಕೀಯ ಜೀವನದ ಏಳು-ಬೀಳುಗಳಲ್ಲಿ ನಿರಂತರವಾಗಿ ಬೆಂಬಲವಾಗಿ ನಿಂತು, ಇಡೀ ಕುಟುಂಬಕ್ಕೆ ಮಾತೃಶಕ್ತಿಯಾಗಿದ್ದ ಸರಳ ಸಜ್ಜನಿಕೆಯ ತಾಯಿ ಚೆನ್ನಮ್ಮನವರ ಅಗಲಿಕೆ ಗೌಡರ ಇಡೀ ಕುಟುಂಬಕ್ಕೆ ದೊಡ್ಡ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಹಾಗೂ ಶ್ರೀ ದೇವೇಗೌಡರು, ಶ್ರೀ ಕುಮಾರಸ್ವಾಮಿ ಮತ್ತು ಅವರ ಇಡೀ ಕುಟುಂಬಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತಾ, ನನ್ನ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತಿದ್ದೇನೆ. ಓಂ ಶಾಂತಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರಳತೆ ಹಾಗೂ ತಾಳ್ಮೆಯ ಸಾಕಾರಮೂರ್ತಿಯಾಗಿದ್ದ ಅವರು, ಶ್ರೀ ದೇವೇಗೌಡರ ಸುದೀರ್ಘ ಸಾರ್ವಜನಿಕ ಜೀವನಕ್ಕೆ ಭದ್ರ ಬುನಾದಿಯಾಗಿ, ಇಡೀ ಕುಟುಂಬವನ್ನು ಮಮತೆಯಿಂದ ಮುನ್ನಡೆಸಿದ ಆದರ್ಶ ಮಾತೃಶಕ್ತಿಯಾಗಿದ್ದರು. ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮನವರ ಅಗಲಿಕೆಯ ಸುದ್ದಿ ಕೇಳಿ ದುಃಖವಾಯಿತು. ದೇವೇಗೌಡರ ರಾಜಕೀಯ ಮತ್ತು ಹೋರಾಟದ ಬದುಕಿಗೆ ಸದಾ ಬೆನ್ನೆಲುಬಾಗಿ ನಿಂತವರು ಅವರ ಮಡದಿ ಚೆನ್ನಮ್ಮನವರು. ಈ ಆಘಾತದಿಂದ ದೇವೇಗೌಡರ ಕುಟುಂಬ ಆದಷ್ಟು ಬೇಗ ಹೊರಬರಲಿ ಎಂದು ಆಶಿಸುತ್ತೇವೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಕುಟುಂಬವರ್ಗದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಜಿ.ಪರಮೇಶ್ವರ್ ಸಂತಾಪದ ನುಡಿಗಳನ್ನಾಡಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿ, ಅವರ ತಾಯಿ ಶ್ರೀಮತಿ ಚನ್ನಮ್ಮ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಭಗವಂತ ನೀಡಲಿ, ಹಿರಿಯ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಸಚಿವ ಈಶ್ವರ ಖಂಡ್ರೆ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ ಕೊಡುಗೆ ಮಹತ್ವದ್ದು ಎಂದು ತಿಳಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ನನಗೆ ತಾಯಿ ಸಮಾನಾರಾಗಿದ್ದ ಶ್ರೀಮತಿ ಚನ್ನಮ್ಮ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ. ನನ್ನ ರಾಜಕೀಯ ಗುರುಗಳಾದ ದೇವೇಗೌಡರ ಧರ್ಮ ಪತ್ನಿ ಚೆನ್ನಮ್ಮ ಅವರಿಗೆ ದೇವರ ಬಗ್ಗೆ ಅಪಾರ ಭಕ್ತಿ. ನನಗೂ ಹಲವಾರು ಬಾರಿ ಅವರ ಆಶೀರ್ವಾದ ಭಾಗ್ಯ ಸಿಕ್ಕಿದೆ. ಚೆನ್ನಮ್ಮ ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಮೀರ್ ಅಹಮದ್ ಖಾನ್ ಸಂತಾಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

