ಕಾಂಗ್ರೆಸ್ ಕಚೇರಿಯಲ್ಲಿ ಚಿದಂಬರಂ ಪ್ರತ್ಯಕ್ಷ

Public TV
2 Min Read
chidambaram 1

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಲಂಚ ಸ್ವೀಕಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಇಂದು ಸಂಜೆ ವೇಳೆ ಪ್ರತ್ಯಕ್ಷರಾಗಿದ್ದರು.

ನಾಪತ್ತೆಯಾಗಿದ್ದ ಚಿದಂಬರಂ ಅವರು ಏಕಾಏಕಿ ಕಾಂಗ್ರೆಸ್ ಕಚೇರಿಯಲ್ಲಿ ಹಾಜರಾಗಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನಾನು ಪ್ರಕರಣದಲ್ಲಿ ಆರೋಪಿ ಅಲ್ಲ. ನನ್ನನ್ನು ಹಾಗೂ ನನ್ನ ಮಗನನ್ನು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಲಾಗಿದೆ. ಎಫ್‍ಐಆರ್ ನಲ್ಲೂ ನನ್ನ ಹೆಸರು ಇಲ್ಲ ಎಂದು ಆರೋಪಿಸಿದರು. ಆದರೆ ಮಾಧ್ಯಮ ಪ್ರಶ್ನೆಗಳನ್ನು ಸ್ವೀಕರಿಸಲು ನಿರಾಕರಿಸಿದರು.

chidambaram a

ಎಐಸಿಸಿ ಕಚೇರಿಯಲ್ಲಿ ಚಿದಂಬರಂ ಅವರು ಆಗಮಿಸುವ ಮುನ್ನವೇ ಪಕ್ಷದ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಜಮಾವಣೆಯಾಗಿದ್ದರು. ಅಲ್ಲದೇ ಚಿದಂಬರಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯಕ್ಷರಾಗುತ್ತಿದಂತೆ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಕಚೇರಿಯತ್ತ ದೌಡಾಯಿಸಿದ್ದರು. ಆದರೆ ಅಧಿಕಾರಿಗಳು ಕಚೇರಿಯ ಒಳಗೆ ತೆರಳದಂತೆ ಪಕ್ಷದ ಕಾರ್ಯಕರ್ತರು ಮುಖ್ಯ ಬಾಗಿಲನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಇದು ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಹೈಡ್ರಾಮಕ್ಕೆ ಕಾರಣವಾಗಿತ್ತು.

ಕಾಂಗ್ರೆಸ್ ಪಕ್ಷದ ಎದುರು ಹೈಡ್ರಾಮ ನಡೆಯುತ್ತಿದ್ದರೆ ಸುದ್ದಿಗೋಷ್ಠಿ ನಡೆಸಿ ಬಳಿಕ ನೇರ ಚಿದಂಬರಂ ಅವರು ತಮ್ಮ ನಿವಾಸಕ್ಕೆ ತೆರಳಿದರು. ಚಿದಂಬರಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ಹಿರಿಯ ನಾಯಕರು ಕಚೇರಿಯಲ್ಲಿ ಹಾಜರಿದ್ದರು. ಕಳೆದ ಹಲವು ಗಂಟೆಗಳಿಂದ ಚಿದಂಬರಂ ಅವರಿಗಾಗಿ ಹುಡುಕಾಟ ನಡೆಸಿದ್ದ ಇಡಿ ಮತ್ತು ಸಿಬಿಐ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.

ಇತ್ತ ಚಿದಂಬರಂ ಅವರು ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಮಂಗಳವಾರ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಆ ಬಳಿಕ ಅವರು ನಿವಾಸದಿಂದ ಕಾಣೆಯಾಗಿದ್ದರು.

ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *