ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ನಿಧನ

Public TV
2 Min Read
mv rajasekharan 1

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ.

ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದೀಗ ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಬಿಟ್ಟು ಅಗಲಿದ್ದಾರೆ. ಕೃಷಿಕ ಮತ್ತು ಗ್ರಾಮೀಣಾಭಿವೃದ್ಧಿ ಸಲಹೆಗಾರರಾದ ರಾಜಶೇಖರನ್ 1928ರ ಸೆಪ್ಟೆಂಬರ್ 12 ರಂದು ರಾಮನಾಗರ ಜಿಲ್ಲೆಯ ಮರಲವಾಡಿಯಲ್ಲಿ ಜನಿಸಿದ್ದರು. ಎಂಎಲ್‍ಸಿ, ಸಂಸದ ಮತ್ತು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ರಾಜಶೇಖರನ್ ಅವರು ಸರಳತೆ, ನಮ್ರತೆ ಮತ್ತು ದೊಡ್ಡ ಪ್ರಬುದ್ಧತೆ ಹೊಂದಿರುವ ರಾಜಕಾರಣಿಯಾಗಿದ್ದರು.

ಕೇಂದ್ರದ ಮಾಜಿ ಸಚಿವ ಎಂವಿ ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಂವಿಆರ್ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಅಳಿಯನಾದ ಅವರು, ಗ್ರಾಮೀಣ ಆರ್ಥಿಕತೆ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣಾಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆ ಸ್ಥಾಪಿಸಿದ್ದರು ಎಂದು ಸ್ಮರಿಸಿದ್ದಾರೆ.

ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. ಡಾ. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.

ಮೌಲ್ಯಾಧಾರಿತ ರಾಜಕಾರಣಿಯಾಗಿದ್ದ ಅವರ ನಿಧನ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

“ಆತ್ಮೀಯರು, ಕೇಂದ್ರದ ಮಾಜಿ ಸಚಿವರಾಗಿದ್ದ ಎಂ ವಿ ರಾಜಶೇಖರನ್ ಅವರ ನಿಧನ ದುಃಖಕರವಾಗಿದೆ. ಸರಳ, ಸಜ್ಜನಿಕೆಗಳ ಎಂ.ವಿ.ಆರ್ ಅವರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *