ಉಡುಪಿ: ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಕಳವು ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ. ಕಳತ್ತೂರಿನ ವಸಂತಿ ಸುನೀತಾ ಕ್ವಾಡ್ರಸ್ ಎಂಬವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಒಂದು ದನ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಸಮೀಪದಲ್ಲಿ ನಿಲ್ಲಿಸಿದ್ದ ಖಾಸಗಿ ಟೆಂಪೋದಲ್ಲಿ ಕಾಣೆಯಾಗಿದ್ದ ದನ ಸೇರಿದಂತೆ ಎರಡು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿರುವುದು ಪತ್ತೆಯಾಗಿತ್ತು. ದೂರುದಾರರನ್ನು ಕಂಡ ಆರೋಪಿಗಳು ಟೆಂಪೋ ಸಮೇತ ಪರಾರಿಯಾಗಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ತನಿಖೆ ನಡೆಸಿ ಕಳತ್ತೂರಿನ ಉಮ್ಮರಬ್ಬ (64) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ತಲೆಮರೆಸಿಕೊಂಡಿದ್ದ ಮೊಹಮ್ಮದ್ ಶರೀಫ್ (31), ಶಂಶುದ್ದೀನ್ (57) ಹಾಗೂ ಮೊಹಮ್ಮದ್ ಆಸೀರ್ (24)ನನ್ನು ಕಾಪು ತಾಲೂಕಿನ ಕೊಪ್ಪಲಂಗಡಿ ಬಳಿಯಲ್ಲಿ ವಾಹನ ಸಮೇತ ಪತ್ತೆಹಚ್ಚಿದ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

