ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು ಎಲ್ಲಾ ವಿಭಾಗದ ಕಾಲೇಜು ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಎನ್‍ಎಸ್‍ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯರವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಹಿಂದಿನ ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮುಂದುವರಿಸಬೇಕೆಂದು ಹಾಗೂ ವಿದ್ಯಾರ್ಥಿಗಳು ಉನ್ನತ ಶೈಕ್ಷಣಿಕ ಉದ್ದೇಶಕ್ಕಾಗಿ ಪಡೆದ ಅರಿವು ಯೋಜನೆಯ ಸಾಲ ಮತ್ತು ಸಹಕಾರಿ ಮತ್ತು ರಾಷ್ಟ್ರೀಯ ಬ್ಯಾಂಕ್ ಗಳಿಂದ ತೆಗೆದುಕೊಂಡಿರುವ ಸಾಲವನ್ನು ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಮನ್ನಾ ಮಾಡಬೇಕೆಂದು ವಿದ್ಯಾರ್ಥಿಗಳ ಪರವಾಗಿ ಸವಾದ್ ಸುಳ್ಯರವರು ಮನವಿ ನೀಡಿದರು.
Advertisement
ಸಿದ್ದರಾಮಯ್ಯ ಸರ್ಕಾರ ಹಿಂದಿನ ಬಜೆಟ್ ನಲ್ಲಿ ಘೋಷಿಸಿದ್ದ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯು ಆರ್ಥಿಕ ಹೊರೆಯಾಗುತ್ತದೆ ಎಂಬ ಕಾರಣ ನೀಡಿ ಕರ್ನಾಟಕ ಸಾರಿಗೆ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ರದ್ದು ಮಾಡಿದ್ದು ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ಯೋಜನೆಯನ್ನು ಮುಂದುವರಿಸಬೇಕೆಂದು ಎಂದು ಎನ್‍ಎಸ್‍ಐಐ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಟಿ.ಎಂ ಶಹೀದ್ ಉಪಸ್ಥಿತರಿದ್ದರು.