ಶಿವಮೊಗ್ಗ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಲು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಡಿಸೆಂಬರ್ 26 ರಿಂದ 28ರವರೆಗೆ ವಿಶೇಷ ಶಿಬಿರ ಆಯೋಜಿಸಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಜಿಲ್ಲೆಯ ಎಲ್ಲಾ ಸಾಮಾನ್ಯ ಸೇವಾ ಕೇಂದ್ರದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
Advertisement
Advertisement
ಆಯುಷ್ಮಾನ್ ಯೋಜನೆಯಡಿ ಪ್ರಸ್ತುತ 4 ಲಕ್ಷ ಜನರನ್ನು ನೋಂದಾಯಿಸಿ ಕಾರ್ಡ್ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 14 ಲಕ್ಷ ಫಲಾನುಭವಿಗಳನ್ನು ಈ ಯೋಜನೆಯಡಿ ನೋಂದಾಯಿಸುವ ಗುರಿಯನ್ನು ಹೊಂದಲಾಗಿದೆ. ಪ್ರಸ್ತುತ 116 ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಯೋಜನೆಯಡಿ ಫಲಾನುಭವಿಗಳಿಗೆ ಕಾರ್ಡ್ ನೀಡಲಾಗುತ್ತಿದ್ದು, ಇನ್ನೂ 21 ಕೇಂದ್ರಗಳು ಎರಡು ದಿನಗಳಲ್ಲಿ ಸಿದ್ಧಗೊಳ್ಳಲಿವೆ. ಫಲಾನುಭವಿಗಳಿಂದ ನೋಂದಣಿಗೆ ನಿಗದಿಪಡಿಸಿರುವ ಶುಲ್ಕವನ್ನು ಮಾತ್ರ ಪಡೆಯಬೇಕು. ಕಾರ್ಡ್ ನೀಡಲು ಸತಾಯಿಸುತ್ತಿರುವ ಬಗ್ಗೆ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಸಂಸದರು ಹೇಳಿದರು.
Advertisement
ಜಿಲ್ಲೆಯಲ್ಲಿರುವ ಎಲ್ಲಾ 106 ಪ್ರಾಥಮಿಕ ಆರೋಗ್ಯ ಕೇಂದ್ರ, 12 ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಡಿಸೆಂಬರ್ 26, 27 ಮತ್ತು 28ರಂದು ವಿಶೇಷ ನೋಂದಣಿ ಅಭಿಯಾನ ಆಯೋಜಿಸಲಾಗುವುದು. ಮೂರು ದಿನಗಳಲ್ಲಿ ಪ್ರತಿ ಕೇಂದ್ರಗಳಲ್ಲಿ ತಲಾ 500 ಮಂದಿಗೆ ಆರೋಗ್ಯ ಕಾರ್ಡ್ ವಿತರಿಸುವ ಗುರಿ ನಿಗದಿಪಡಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ಮೂರು ಮಂದಿ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗುವುದು. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ನೋಂದಣಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
Advertisement
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಮಾತನಾಡಿ, ಜನರು ನೋಂದಣಿಗೆ ಆಗಮಿಸುವ ಮೊದಲೇ ಅವರು ಬರಬೇಕಾದ ಸಮಯವನ್ನು ನಿಗದಿಪಡಿಸಿ ಮಾಹಿತಿ ನೀಡಬೇಕು. ತಾಂತ್ರಿಕ ತೊಂದರೆಗಳು ಎದುರಾಗದಂತೆ ಕ್ರಮ ವಹಿಸಲಾಗುವುದು. ಸ್ಥಳೀಯ ಪಂಚಾಯ್ತಿನಿಂದ ಹೆಚ್ಚುವರಿಯಾಗಿ ಸೇವಾ ಕೇಂದ್ರಗಳಿಗೆ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೀಡಲಾಗುವುದು. ಎಲ್ಲಾ ಸೇವಾ ಕೇಂದ್ರಗಳ ಸಿಬ್ಬಂದಿ ಆಂದೋಲನದ ರೀತಿಯಲ್ಲಿ ನೋಂದಣಿ ಕಾರ್ಯವನ್ನು ಮಾಡಬೇಕು. ಮೂರು ದಿನಗಳಲ್ಲಿ 75 ಸಾವಿರ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸುವ ಗುರಿಯನ್ನು ಹೊಂದಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಯೋಜನೆಯಡಿ 24,048 ಫಲಾನುಭವಿಗಳು ಸೌಲಭ್ಯ ಪಡೆದುಕೊಂಡಿದ್ದು, 3.88 ಕೋಟಿ ರೂ. ಪಾವತಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮಾಹಿತಿ ನೀಡಿದರು. ಈ ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಉಪಸ್ಥಿತರಿದ್ದರು.