ಕೊನೆಯ ದಿನವೂ ಮಳೆಯಾಟ – ಗಬ್ಬಾ ಟೆಸ್ಟ್‌ ಡ್ರಾನಲ್ಲಿ ಅಂತ್ಯ; WTC ಫೈನಲ್‌ ರೇಸ್‌ನಲ್ಲಿ ಉಳಿದ ಭಾರತ

Public TV
3 Min Read
Ind vs Aus 4

ಬ್ರಿಸ್ಬೇನ್: ಬಾರ್ಡರ್‌ ಗವಾಸ್ಕರ್‌ ಟ್ರೋಫಿ 3ನೇ ಟೆಸ್ಟ್‌ ಪಂದ್ಯದ ಕೊನೆಯ ದಿನವೂ ಮಳೆ ಆಟವೇ ಮುಂದುವರಿದಿದ್ದು, ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರಿಂದ ಭಾರತಕ್ಕೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಹಾದಿ ಕೊಂಚ ಸುಗಮವಾದಂತಾಗಿದೆ. ಸದ್ಯ ಮೂರು ಪಂದ್ಯಗಳ ಪೈಕಿ 1-1ರಲ್ಲಿ ಸರಣಿ ಸಮಬಲಗೊಂಡಿದೆ. ಉಳಿದ 2 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದರೆ, WTC ಫೈನಲ್‌ ತಲುಪಲಿದೆ.

Ind vs Aus 2 1

ವೂಲೂಂಗಬ್ಬಾದ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 4ನೇ ದಿನದ ಅಂತ್ಯಕ್ಕೆ ಭಾರತ 9 ವಿಕೆಟ್‌ ನಷ್ಟಕ್ಕೆ 252 ರನ್‌ ಗಳಿಸಿ, ಫಾಲೋ ಆನ್‌ ಭೀತಿಯಿಂದ ಪಾರಾಗಿತ್ತು. ಕೊನೆಯ ಕ್ರೀಸ್‌ ಆರಂಭಿಸಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 260 ರನ್‌ಗಳಿಗೆ ಆಲೌಟ್‌ ಆಯಿತು. ಬಳಿಕ 185 ರನ್‌ಗಳ ಮುನ್ನಡೆಯೊಂದಿಗೆ ತನ್ನ 2ನೇ ಇನ್ನಿಂಗ್ಸ್‌ ಆರಂಭಿಸಿದ ಆಸೀಸ್‌ 7 ವಿಕೆಟ್‌ ನಷ್ಟಕ್ಕೆ 89 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ಈ ಮೂಲಕ ಭಾರತಕ್ಕೆ 275 ರನ್‌ಗಳ ಗುರಿ ನೀಡಿತು. ಇತ್ತ ಭಾರತ 2.1 ಓವರ್‌ಗಳಲ್ಲಿ 8 ರನ್‌ ಗಳಿಸುತ್ತಿದ್ದಂತೆ ಮಳೆ ಕಾಟ ಶುರುವಾಯಿತು. ನಿರಂತರವಾಗಿ ಸುರಿಯುತ್ತಿದ್ದರಿಂದ ಪಂದ್ಯ ಡ್ರಾನತ್ತ ತಿರುಗಿತು.

Akash Deep Jasprit Bumrah

ಭಾರತವನ್ನು ಕಾಪಾಡಿದ ಆಕಾಶ್‌ ದೀಪ್‌:
ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 3ನೇ ದಿನ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು 51 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು. 4ನೇ ದಿನ ಆರಂಭಿಕ ಕೆ.ಎಲ್ ರಾಹುಲ್ 84 ರನ್, ರವೀಂದ್ರ ಜಡೇಜಾ 77 ರನ್‌ಗಳ ಕೊಡುಗೆ ನೀಡಿದರೂ, ಫಾಲೋ ಆನ್‌ಗೆ ತುತ್ತಾಗುವ ಭೀತಿಯಲ್ಲಿತ್ತು. ಆದ್ರೆ ಕೊನೇ ಕ್ಷಣದಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಆಕಾಶ್ ದೀಪ್, ಪ್ಯಾಟ್ ಕಮ್ಮಿನ್ಸ್ ಅವರ ಪಾಲಿನ 21ನೇ ಓವರ್‌ನ 4ನೇ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಟೀಂ ಇಂಡಿಯಾವನ್ನು ಫಾಲೋ ಆನ್‌ನಿಂದ ಕಾಪಾಡಿದರು. ಜಸ್ಪ್ರೀತ್ ಬುಮ್ರಾ ಸಹ ಬ್ಯಾಟಿಂಗ್‌ನಲ್ಲಿ ನೆರವಾದರು.

KL Rahul 1

ಟೀಂ ಇಂಡಿಯಾ ಪರ ಕೆ.ಎಲ್ ರಾಹುಲ್ 84 ರನ್ (139 ಎಸೆತ, 8 ಬೌಂಡರಿ), ರವೀಂದ್ರ ಜಡೇಜಾ 77 ರನ್ (123 ರನ್, 7 ಬೌಂಡರಿ, 1 ಸಿಕ್ಸರ್), ರೋಹಿತ್ ಶರ್ಮಾ 10 ರನ್, ನಿತೀಶ್ ಕುಮಾರ್ ರೆಡ್ಡಿ 16 ರನ್ ಗಳಿಸಿದ್ರೆ ಉಳಿದವರು ಅಲ್ಪಮೊತ್ತಕ್ಕೆ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಆಕಾಶ್ ದೀಪ್ 31 ರನ್ ಗಳಿಸಿದ್ರೆ, ಜಸ್ಪ್ರೀತ್ ಬುಮ್ರಾ 10 ರನ್‌ ಗಳಿಸಿದರು.

Ravindra Jadeja

ಭಾರತದ WTC ಫೈನಲ್‌ ಹಾದಿ ಹೇಗಿದೆ?
ಇದೇ ಡಿ.26ರಿಂದ ದಕ್ಷಿಣ ಆಫ್ರಿಕಾ ತಂಡವು ಪಾಕಿಸ್ತಾನದ ವಿರುದ್ಧ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನಾಡಲಿದೆ. ಈ ಸರಣಿಯ ಒಂದು ಪಂದ್ಯದಲ್ಲಿ ಪಾಕ್‌ ಗೆಲ್ಲಬೇಕು. ಇದೇ ವೇಳೆ ಆಸೀಸ್‌ ವಿರುದ್ಧ ಸರಣಿಯನ್ನು ಭಾರತ 3-1 ಅಂತರದಲ್ಲಿ ಗೆದ್ದರೆ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಅಥವಾ ಭಾರತವು ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಸರಣಿಯನ್ನು 2-1 ಅಂತರದಲ್ಲಿ ಗೆದ್ದರೆ, ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಆಸೀಸ್‌ 1-1 ಅಥವಾ ಲಂಕಾ 1-0 ಅಂತರದಲ್ಲಿ ಕೊನೆಯಗೊಳ್ಳಬೇಕು. ಅಥವಾ ಭಾರತ ಆಸೀಸ್‌ ವಿರುದ್ಧ 2-2 ಅಂತರಲ್ಲಿ ಗೆದ್ದರೆ, ಲಂಕಾ, ಆಸೀಸ್‌ ಇರುದ್ಧ 1-0 ಅಥವಾ 2-0 ವಿರುದ್ಧ ಗೆದ್ದರೆ ಮಾತ್ರ ಭಾರತ ಫೈನಲ್‌ಗೆ ಅರ್ಹತೆ ಪಡೆಯುವ ಸಾಧ್ಯತೆಗಳಿವೆ.

Virat Kohli Gautam Gambhir

ಡ್ರೆಸ್ಸಿಂಗ್ ರೂಮ್‌ನಲ್ಲಿ ಕೊಹ್ಲಿ, ಗಂಭೀರ್ ಸಂಭ್ರಮ:
213 ರನ್‌ಗಳಿಗೆ ಭಾರತ ತನ್ನ 9ನೇ ವಿಕೆಟ್ ಕಳೆದುಕೊಂಡಿತು. ಇದರಿಂದ ಭಾರತ ಫಾಲೋ ಆನ್‌ಗೆ ತುತ್ತಾಗಿ ಕಳೆದುಕೊಳ್ಳುವ ಭೀತಿ ಎದುರಾಗಿತ್ತು. ಆದ್ರೆ ಕೊನೆಯ ವಿಕೆಟ್‌ಗೆ ಜೊತೆಗೂಡಿದ ಬುಮ್ರಾ, ಆಕಾಶ್‌ದೀಪ್ ನಿರೀಕ್ಷೆಗೂ ಮೀರಿದ ಪ್ರದರ್ಶನ ತೋರಿದರು. ಪ್ಯಾಟ್ ಕಮ್ಮಿನ್ಸ್ ಅವರ 21ನೇ ಓವರ್‌ನ 4ನೇ ಎಸೆತವನ್ನು ಆಕಾಶ್ ದೀಪ್ ಬೌಂಡರಿಗೆ ಅಟ್ಟುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಹಿರಿಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ವಿರಾಟ್ ಕೊಹ್ಲಿ, ಕೋಚ್ ಗೌತಮ್ ಗಂಭೀರ್, ರೋಹಿತ್ ಶರ್ಮಾ, ಪರಸ್ಪರ ಕೈಕುಲುಕಿ ಸಂಭ್ರಮಿಸಿದ್ದರು.

Share This Article