ಗದಗ: ಯುವಕರಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ‘ಭಾರತ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ‘ಭಾರತ ಜೋಡೋ ಯುವ ಸಂಘ’ಗಳ ಸ್ಥಾಪನೆ ಕುರಿತ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಕರು ಸಮಾಜದ ಮುಖ್ಯವಾಹಿನಿಗೆ ಬಂದು ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಐಕ್ಯತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಯುವಕರಲ್ಲಿ ನಾಯಕತ್ವ ಗುಣ ಬೆಳೆಸಲು ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರ ಹೆಚ್ಚಿಸಲು ಈ ಸಂಘಗಳು ಉತ್ತಮ ವೇದಿಕೆಯಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿತ ಕಾಲಮಿತಿಯೊಳಗೆ ಸಂಘಗಳ ರಚನೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ ಓದಿ: ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ
ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಈ ಸಂಘಗಳೊಂದಿಗೆ ಕೈಜೋಡಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಗದಗ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಚ್.ಎಸ್. ಜಿನಗ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ನೀಟ್ ಪ್ರತಿಭಟನೆ ವೇಳೆ ಪೊಲೀಸ್ ವ್ಯಾನ್ ತಡೆದಿದ್ದ ರಿಯಾ ಅಹೀರ್ ಬಿಗ್‌ಬಾಸ್ ಮನೆ ಆಫರ್; ಫ್ಯಾನ್ಸ್ ಕೈಯಲ್ಲಿ ನಿರ್ಧಾರ!
