ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಡ್ಡಾಯ ವರ್ಗಾವಣೆಗೆ ಹೆದರಿ ಕೋಮಾಗೆ ಜಾರಿದ್ದ ಮುಖ್ಯ ಶಿಕ್ಷಕ ಮೃತಪಟ್ಟಿದ್ದಾರೆ.
48 ವರ್ಷದ ಸುಭಾಷ್ ತಲಘಟ್ಟ ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಭಾಷ್, ಆನಂದ ನಗರದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.
ರಾಜ್ಯದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕಲಿಕಾ ಮಟ್ಟ ಸುಧಾರಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸದ್ಯ ಕಡ್ಡಾಯ ವರ್ಗಾವಣೆ ನೀತಿಯನ್ನ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಸುಭಾಷ್ ಅವರು ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ರಾಮಗಿರಿಗೆ ವರ್ಗಾವಣೆಗೊಂಡಿದ್ದರು. ಇದರಿಂದ ಮನನೊಂದು ಶಿಕ್ಷಕ ಕೋಮಾ ಸ್ಥಿತಿಗೆ ಜಾರಿದ್ದಾರೆ ಎಂದು ಅವರ ಪತ್ನಿ ಹಾಗೂ ಸಂಬಂಧಿಕರು ಆರೋಪ ಮಾಡಿದ್ದರು.
ಅಲ್ಲದೆ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆ ಮುಂದೆ ಶಿಕ್ಷಕರು, ಸಂಬಂಧಿಕರು ಹಾಗೂ ಸುಭಾಷ್ ಪತ್ನಿ ಜಮಾಯಿಸಿ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರ ಸುಭಾಷ್ ಅವರನ್ನು ವರ್ಗಾವಣೆ ಮಾಡಿದ್ದೇ ಅವರ ಈ ಸ್ಥಿತಿಗೆ ಕಾರಣ ಎಂದು ಆರೋಪ ಮಾಡಲಾಗಿತ್ತು.