ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ ತಡೆಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ ಬಳಿಕ ಮತ್ತೆ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ (Karnataka Government) ನಡುವಿನ ಜಟಾಪಟಿ ಮುಂದುವರಿದಿದೆ. ರಾಜ್ಯ ಸರ್ಕಾರ ಕಳುಹಿಸಿದ್ದ 2 ವಿಧೇಯಕಗಳನ್ನು ಸ್ಪಷ್ಟನೆ ಕೇಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ವಾಪಸ್ ಕಳುಹಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ವಿಧೇಯಕ – 2024, ಕರ್ನಾಟಕ ಸೌಹಾರ್ಧ ಸಹಕಾರಿ (ತಿದ್ದುಪಡಿ) ವಿಧೇಯಕ – 2024 ಎರಡೂ ವಿಧೇಯಕಗಳನ್ನ ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಇದನ್ನೂ ಓದಿ: ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ವಿಧೇಯಕ – 2024ಕ್ಕೆ ಹಲವು ಆಕ್ಷೇಪಗಳನ್ನು ರಾಜ್ಯಪಾಲರು ಎತ್ತಿದ್ದಾರೆ. ರಾಜ್ಯ ಸರ್ಕಾರ ಈ ವಿಧೇಯಕಲ್ಲಿ ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿ ಅಂಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡುವುದು ಸರಿಯಾದ ಕ್ರಮವಲ್ಲ. ಇದರಿಂದ ಸಹಕಾರಿ ಸಂಘದ ನಿಯಂತ್ರಣಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ. ಚುನಾಯಿತ ಸದಸ್ಯರ ಹಕ್ಕುಗಳನ್ನು ಹಿಂಬಾಗಿಲಿನ ಮೂಲಕ ಕಸಿದುಕೊಳ್ಳಲಾಗುತ್ತದೆ. ಅಲ್ಲದೇ ಇದು ಸಹಕಾರಿ ಕ್ಷೇತ್ರದ ಸ್ವಾಯತ್ತತೆಯನ್ನು ದುರ್ಬಲಗೊಳಿಸುವ ಹೆಜ್ಜೆಯಾಗಿದೆ ಎಂದು ಆಕ್ಷೇಪಿಸಿದ್ದಾರೆ.
ಇನ್ನೂ ಕರ್ನಾಟಕ ಸೌಹಾರ್ಧ ಸಹಕಾರಿ (ತಿದ್ದುಪಡಿ) ವಿಧೇಯಕ – 2024ಕ್ಕೂ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಪಾಲರು, ಈ ವಿಧೇಯಕದಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ ರದ್ದುಗೊಳಿಸುವುದಾಗಿತ್ತು. ಸಹಕಾರ ಸಂಘಗಳ ಚುನಾವಣೆ ಸ್ವತಂತ್ರ ಮತ್ತು ನ್ಯಾಯಯುತವಾಗಿ ನಡೆಸಲು ಪ್ರಾಧಿಕಾರವಿದೆ. ಆರ್ಥಿಕ ಹೊರೆಯ ಕಾರಣದಿಂದಾಗಿ ಸಹಕಾರಿ ಚುನಾವಣಾ ಪ್ರಾಧಿಕಾರಗಳನ್ನು ರದ್ದುಗೊಳಿಸುವ ಪ್ರಸ್ತಾಪವು ಸೂಕ್ತವಲ್ಲ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ – 2 ದಿನದ ಹಿಂದೆ ಬೆಂಗಳೂರಿಗೆ 10,000 ಫಾರಂ ಕೋಳಿ ಸಾಗಾಟ