ಬೆಂಗಳೂರು: ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡಿದ್ದು, ನಾವು ನಮ್ಮ ಕಚೇರಿಯಲ್ಲೇ ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಜಯಂತಿಯನ್ನು ಬಿಜೆಪಿ ರದ್ದು ಮಾಡಿದೆ. ಆದರೆ, ನಾವು ನಮ್ಮ ಕಚೇರಿಯಲ್ಲೇ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತೇವೆ. ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರ ಟಿಪ್ಪು ಜಯಂತಿಯನ್ನು ಜಾರಿಗೆ ತಂದಿತ್ತು. ಮೈತ್ರಿ ಸರ್ಕರದ ನಂತರವೂ ಸಹ ಇದನ್ನು ಮುಂದುವರಿಸಲಾಗಿತ್ತು. ಇದೀಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಅವರು ರದ್ದು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾವು ಟಿಪ್ಪು ಜಯಂತಿಯನ್ನು ಹಳೆಯ ಜೆಡಿಎಸ್ ಕಚೇರಿಯಲ್ಲಿದ್ದಾಗಿನಿಂದಲೂ ಆಚರಿಸುತ್ತಾ ಬಂದಿದ್ದೇವೆ. ಸಿದ್ದರಾಮಯ್ಯನವರು ಅಧ್ಯಕ್ಷರಾಗಿದ್ದಾಗಲೂ ಆಚರಣೆ ಮಾಡಿದ್ದೇವೆ. ರಾಜಕೀಯಕ್ಕಾಗಿ ಇಂತಹ ನಿರ್ಧಾರ ಕೈಗೊಳ್ಳಬಾರದು. ನಾನು ಮುಖ್ಯಮಂತ್ರಿಯಗಿದ್ದಾಗ ಮತೀಯ ಅಲ್ಪ ಸಂಖ್ಯಾತರಿಗೆ 5 ರೆಶಿಡೆನ್ಸಿಯಲ್ ಶಾಲೆ ಪ್ರಾರಂಭಿಸಿ ಟಿಪ್ಪು ಹೆಸರನ್ನೇ ಇಟ್ಟಿದ್ದೆ. ಹೀಗಾಗಿ ಇನ್ನು ಮುಂದೆಯೂ ಸಹ ನಮ್ಮ ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಜಯಂತಿಯನ್ನು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ.
ದ್ವೇಷದ ರಾಜಕಾರಣ ಮಾಡುವುದಿಲ್ಲ, ಎಂದು ಹೇಳುತ್ತಾರೆ. ಆದರೆ, ಇಂತಹ ನಿರ್ಧಾರ ಕೈಗೊಳ್ಳುತ್ತಾರೆ. ಮೂರೇ ದಿನದಲ್ಲಿ ಅವರ ಬಗ್ಗೆ ಏಕೆ ಮಾತನಾಡಬೇಕು. ಇನ್ನೂ ಸಮಯವಿದೆ ಈಗಲೇ ಏಕೆ ವಿರೋಧ ವ್ಯಕ್ತಪಡಿಸಬೇಕು. ಇನ್ನೂ ಮೂರು ವರ್ಷ ಎಂಟು ತಿಂಗಳುಗಳ ಕಾಲ ಆಡಳಿತ ನಡೆಸುತ್ತಾರೆ. ಹೇಗೆ ನಡೆಸುತ್ತಾರೋ ಕಾದು ನೋಡುತ್ತೇನೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಯಡಿಯೂರಪ್ಪನವರ ವಿರುದ್ಧ ಹರಿಹಾಯ್ದರು.
2016 ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಮೊದಲು ಟಿಪ್ಪು ಜಯಂತಿಯನ್ನ ಅಲ್ಪಸಂಖ್ಯಾತ ಇಲಾಖೆಯಿಂದ ಆಚರಣೆ ಮಾಡಲಾಗುತ್ತಿದ್ದು, ಆ ಬಳಿಕ ಕನ್ನಡ ಸಂಸ್ಕೃತಿ ಇಲಾಖೆಯಿಂದ ಜಯಂತಿ ಆಚರಿಸಲಾಗುತ್ತಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರವೂ ಆಚರಣೆಯನ್ನು ಮುಂದುವರಿಸಿತ್ತು.
2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸುವುದಾಗಿ ಹೇಳಿತ್ತು. ಅಷ್ಟೇ ಅಲ್ಲದೇ ಸರ್ಕಾರದ ವತಿಯಿಂದಲೇ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಿಸುತ್ತಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದರು.