ಪೆಟ್ರೋಲ್, ಡೀಸೆಲ್ ಜಿಎಸ್‍ಟಿ ವ್ಯಾಪ್ತಿಗೆ? – ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ

Public TV
2 Min Read
Petrol Diesel Price 1

ನವದೆಹಲಿ: ಪೆಟ್ರೋಲ್, ಡೀಸೆಲ್ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‍ಟಿ ಮಂಡಳಿ ಶುಕ್ರವಾರದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಿದೆ.

ಕಳೆದ ಜೂನ್ ತಿಂಗಳಿನಲ್ಲಿ ಕೇರಳ ಹೈಕೋರ್ಟ್ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲೆ ಪ್ರತ್ಯೇಕ ದರವನ್ನು ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಜಿಎಸ್‍ಟಿ ಮಂಡಳಿಗೆ ಸೂಚಿಸಿತ್ತು. ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಎಸ್‍ಟಿ ಮಂಡಳಿಯ ಸಭೆಯಲ್ಲಿ ಈ ವಿಚಾರವನ್ನು ಚರ್ಚೆಗೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Petrol

ಈ ಸಭೆಯಲ್ಲಿ ಕೋವಿಡ್ 19 ಚಿಕಿತ್ಸಾ ಉಪಕರಣ ಮತ್ತು ಔಷಧ ಸೇರಿದಂತೆ ಕೆಲ ಅಗತ್ಯ ವಸ್ತುಗಳಿಗೆ ಸುಂಕ ವಿನಾಯಿತಿಯನ್ನು ವಿಸ್ತರಿಸುವ ಬಗ್ಗೆಯೂ ಮಂಡಳಿಯು ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಬಿಜೆಪಿ, ಕಾಂಗ್ರೆಸ್ ನಿಲುವು ಏನು?

ಒಪ್ಪಿಗೆ ಸಿಗುತ್ತಾ?
ಇಲ್ಲಿಯವರೆಗೆ ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿವೆ. ಜಿಎಸ್‍ಟಿ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದರೆ ಮಂಡಳಿ ಸದಸ್ಯ ರಾಜ್ಯಗಳ ಮೂರನೇ ಎರಡರಷ್ಟು ಬಹುಮತ ಬೇಕು.

ಜನರು ಮತ್ತು ರಾಜಕೀಯ ಪಕ್ಷಗಳು ಆಗ್ರಹಿಸುತ್ತಿದ್ದರೂ ಜಿಎಸ್‍ಟಿ ವ್ಯಾಪ್ತಿಗೆ ತೈಲ ಬರುವುದು ಅಷ್ಟು ಸುಲಭವಿಲ್ಲ. ಜಿಎಸ್‍ಟಿ ವ್ಯಾಪ್ತಿಗೆ ತಂದರೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಹಾಕುವ ಸಂಭವವೇ ಹೆಚ್ಚು.  ಇದನ್ನು ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

diesel petrol14032020 1c

ಅಡುಗೆ ಅನಿಲ (ಎಲ್‍ಪಿಜಿ), ಸೀಮೆಎಣ್ಣೆ, ನಾಫ್ತಾ ಗಳಿಗೆ ಜಿಎಸ್‍ಟಿ ಅನ್ವಯವಾಗುತ್ತಿದೆ. ಆದರೆ ಡೀಸೆಲ್, ಪೆಟ್ರೋಲ್, ನೈಸರ್ಗಿಕ ಅನಿಲ, ಕಚ್ಚಾ ತೈಲ ಮತ್ತು ವಿಮಾನ ಇಂಧನವನ್ನು ಸದ್ಯಕ್ಕೆ ಜಿಎಸ್‍ಟಿಯಿಂದ ಹೊರಗೆ ಇಡಲಾಗಿದೆ. ರಾಜ್ಯ ಸರ್ಕಾರಗಳು ಮದ್ಯ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಬಿಟ್ಟುಕೊಡಲು ಮುಂದಾಗದ ಹಿನ್ನೆಲೆಯಲ್ಲಿ ಇವುಗಳು ಜಿಎಸ್‍ಟಿ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ.  ಇದನ್ನೂ ಓದಿ: ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

ಯಾಕೆ ಬಿಟ್ಟುಕೊಡಲ್ಲ?
ರಾಜ್ಯ ಸರ್ಕಾರಗಳಿಗೆ ಅತಿಹೆಚ್ಚು ಆದಾಯ ಮೂಲವೇ ತೈಲ. ಕೇಂದ್ರ ಸರ್ಕಾರ ಅಬಕಾರಿ ಸುಂಕ ಹಾಕಿದರೆ ರಾಜ್ಯ ಸರ್ಕಾರ ವ್ಯಾಟ್ ಹಾಕುತ್ತದೆ. ಈ ಮೂಲಕ ರಾಜ್ಯದ ಬೊಕ್ಕಸವನ್ನು ತುಂಬಿಸಿಕೊಳ್ಳುತ್ತದೆ. ಅಷ್ಟೇ ಅಲ್ಲದೇ ಸುಲಭವಾಗಿ ಆದಾಯ ಸಂಗ್ರಹವಾಗುತ್ತದೆ. ಸಿಎಂ ಕುಮಾರಸ್ವಾಮಿ ತನ್ನ ಅಧಿಕಾರ ಅವಧಿಯಲ್ಲಿ ರೈತರ ಸಾಲಮನ್ನಾ ಮಾಡಲು ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚುವರಿ ತೆರಿಗೆ ಸಹ ಹಾಕಿದ್ದರು. ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಂಪನ್ಮೂಲ ಹೆಚ್ಚಳ ಮಾಡಲು ಇರುವ ಏಕೈಕ ಮಾರ್ಗ ಎಂದರೆ ತೈಲ. ಹೀಗಾಗಿ ಯಾವುದೇ ಸರ್ಕಾರ ಪೆಟ್ರೋಲನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಒಪ್ಪಿಗೆ ನೀಡುತ್ತಿಲ್ಲ.

PETROL

ಒಂದು ಲೀಟರ್‌ ಪೆಟ್ರೋಲ್‌ ಮೇಲೆ 1 ವರ್ಷದ ಹಿಂದೆ 19.98 ರೂ. ಇದ್ದ ಅಬಕಾರಿ ಸುಂಕ 32.90 ರೂ.ಗೆ ಏರಿಕೆಯಾಗಿದೆ. ಡೀಸೆಲ್‌ ಮೇಲಿದ್ದ 15.83 ರೂ. ಅಬಕಾರಿ ಸುಂಕ 31.8 ರೂ.ಗೆ ಹೆಚ್ಚಳವಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಹಿಂದೆ ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *