ಬೆಂಗಳೂರು: ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು(Guarantee Scheme) ನಿಲ್ಲಿಸುವುದಿಲ್ಲ, ಆತಂಕಬೇಡ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭರವಸೆ ನೀಡಿದ್ದಾರೆ.
ಸರ್ಕಾರ ಗ್ಯಾರಂಟಿ ಯೋಜನೆಯ ಪರಿಷ್ಕರಣೆಗೆ ಕೈ ಹಾಕಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್ ಪ್ರಕಟಿಸಿ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ (Congress) ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ – ಏನೆಲ್ಲಾ ದಾಖಲೆ ಕೊಡಬೇಕು?
ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ ಎಂದಿದ್ದಾರೆ.
ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
