ತುಮಕೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ದೈವಭಕ್ತರು. ಹೀಗಾಗಿ ದೈವ ಶಕ್ತಿಯಿಂದ ದೆಹಲಿಯಲ್ಲಿ ಉನ್ನತ ಸ್ಥಾನ ಅಲಂಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಪರೋಕ್ಷವಾಗಿ ದೇವೇಗೌಡರು ಪ್ರಧಾನಿ ಆಗಬಹುದು ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಮಾಜಿ ಶಾಸಕರು, ಎಚ್.ಡಿ.ದೇವೇಗೌಡ ಅವರು ತುಮಕೂರು ಕ್ಷೇತ್ರದಲ್ಲಿ ಹೆಚ್ಚು ಮತಗಳ ಅಂತರದಲ್ಲಿ ಜಯಗಳಿಸಿ ಸಂಸತ್‍ಗೆ ಹೋದರೆ ಒಂದು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರ್ಯಕರ್ತರು ದೇವೇಗೌಡರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿಕೊಂಡರು.
ಹೇಮಾವತಿ ನದಿಯ ನೀರು ಹಂಚಿಕೆ ವಿಚಾರದಲ್ಲಿ ದೇವೇಗೌಡರಿಂದ ತುಮಕೂರಿಗೆ ಯಾವುದೇ ರೀತಿ ಅನ್ಯಾಯವಾಗಿಲ್ಲ. ಹೇಮಾವತಿಯ ನೀರು ಸರಿಯಾಗಿ ಹಂಚಿಕೆ ಆಗುತ್ತಿರಲಿಲ್ಲ. ಹೀಗಾಗಿ ಹೋರಾಟ ಮಾಡುತ್ತಿದ್ದೇವು. ಸುಖಾಸುಮ್ಮನೆ ಎಚ್.ಡಿ.ದೇವೇಗೌಡರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.
ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ಹಾಸನದ ರಾಜಕಾರಣಿಗಳಿಂದಲೂ ಯಾವುದೇ ರೀತಿಯ ತೊಂದರೆ ಆಗುತ್ತಿರಲಿಲ್ಲ. ಎರಡು ಜಿಲ್ಲೆಯ ಅಧಿಕಾರಿಗಳೇ ನಿರ್ಲಕ್ಷ್ಯ ತೋರುತ್ತಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೆವು. ಈಗ ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಯಥೇಚ್ಛವಾಗಿ ಹರಿಯುತ್ತಿದೆ ಎಂದು ಎಂ.ಟಿ.ಕೃಷ್ಣಪ್ಪ ಅವರು, ದೇವೇಗೌಡರನ್ನು ಸಮರ್ಥಿಸಿಕೊಂಡರು.