ಚಾಮರಾಜನಗರ: ಕಾವೇರಿ ವನ್ಯಜೀವಿ ವಿಭಾಗದ ಹನೂರು(Hanur shoot-out) ಉಪ ವಿಭಾಗ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಮ್ಯಾಜಿಸ್ಟ್ರೇಟ್(Magistrate Case) ತನಿಖೆಗೆ ಆದೇಶಿಸಿದ್ದಾರೆ.

ಹನೂರು ವನ್ಯಜೀವಿ ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟ ಗಸ್ತಿನ ಕರದಿಕಲ್ಲು ಒಡ್ಡು ಎಂಬ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಡಿನೊಳಗೆ ಅಕ್ರಮವಾಗಿ ನುಗ್ಗಿದ್ದ ನಾಡಬಂದೂಕುಧಾರಿಗಳು ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗಾಗಿ ನಡೆಸಿದ ಪ್ರತಿದಾಳಿಯಲ್ಲಿ ಮೂವರಿಗೆ ಗುಂಡು ತಗುಲಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ನೈಜ ಹಿನ್ನೆಲೆ, ಬಳಸಲಾದ ಆಯುಧಗಳು ಮತ್ತು ಸಿಬ್ಬಂದಿ ತೆಗೆದುಕೊಂಡ ಕ್ರಮಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು ಜಿಲ್ಲಾಧಿಕಾರಿಗಳು ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ಇದನ್ನೂ ಓದಿ: ಕಳ್ಳಬೇಟೆಗಾರರಿಂದ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿಯಿಂದ ದಾಳಿ: ಅರಣ್ಯ ಇಲಾಖೆ ಸ್ಪಷ್ಟನೆ ಏನು?
