– ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳ ಮನವಿ
ಮಡಿಕೇರಿ: ಕೊಡಗಿನ ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಕ್ಕೆ (Harangi Dam) ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆ ಜಲಾಶಯವು ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.
ಜಲಾಶಯ ಸಂಪೂರ್ಣ ಭರ್ತಿಯಾದ್ರೆ, ಶನಿವಾರ (ಜು.25) ಮಧ್ಯಾಹ್ನ ಅಥವಾ ಸಂಜೆ ವೇಳೆ ಹಾರಂಗಿ ಡ್ಯಾಂನಿಂದ ನದಿಗೆ (River) ನೀರು ಹರಿಸುವ ಸಾಧ್ಯತೆಯಿದೆ. ಆದ್ದರಿಂದ ಹಾರಂಗಿ ಹಾಗೂ ಕಾವೇರಿ ನದಿ ಪಾತ್ರದ ಜನರಿಗೆ ಕಾವೇರಿ ನೀರಾವರಿ ನಿಗಮ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ತೀವ್ರತೆ ಹೆಚ್ಚಿರುವ ಪರಿಣಾಮ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಏರಿಕೆಯಾಗುತ್ತಿದ್ದು, ಜಲಾಶಯವು ಶೀಘ್ರದಲ್ಲೇ ತನ್ನ ಗರಿಷ್ಠ ಮಟ್ಟ ತಲುಪುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆ ಗಮನದಲ್ಲಿಟ್ಟುಕೊಂಡು, ಶನಿವಾರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಹಾರಂಗಿ ಜಲಾಶಯದಿಂದ ನೀರನ್ನ ಹೊರಬಿಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಆರಂಭಿಕ ಹಂತದಲ್ಲಿ ಸುಮಾರು 3,000 ರಿಂದ 5,000 ಕ್ಯೂಸೆಕ್ಸ್‌ಗಿಂತ ಹೆಚ್ಚಿನ ಪ್ರಮಾಣದ ನೀರನ್ನ ಹಾರಂಗಿ ನದಿಯ ಮೂಲಕ ಕಾವೇರಿ ನದಿಗೆ ಹರಿಸುವ ಸಾಧ್ಯತೆ ಇದೆ. ಒಳಹರಿವಿನ ಪ್ರಮಾಣ ಹೆಚ್ಚಾದರೆ, ನೀರಿನ ಬಿಡುಗಡೆ ಪ್ರಮಾಣವನ್ನ ಹಂತ ಹಂತವಾಗಿ ಹೆಚ್ಚಿಸುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಹಾರಂಗಿ ಹಾಗೂ ಕಾವೇರಿ ನದಿ ಪಾತ್ರದ ಗ್ರಾಮಗಳ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಕಾವೇರಿ ನೀರಾವರಿ ನಿಗಮ ಮನವಿ ಮಾಡಿದೆ. ನದಿ ದಂಡೆಯಲ್ಲಿ ವಾಸಿಸುವವರು, ಕೃಷಿ ಚಟುವಟಿಕೆಯಲ್ಲಿ ತೊಡಗಿರುವವರು ಹಾಗೂ ನದಿಗೆ ಇಳಿಯುವ ಸಾರ್ವಜನಿಕರು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ನದಿ ದಂಡೆಯಲ್ಲಿರುವ ಜಾನುವಾರುಗಳು, ಕೃಷಿ ಉಪಕರಣಗಳು ಹಾಗೂ ಇತರೆ ಆಸ್ತಿ-ಪಾಸ್ತಿಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.
