ನವದೆಹಲಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
Advertisement
Advertisement
ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.
Advertisement
Delhi: President Ram Nath Kovind arrives at the #PadmaAwards ceremony; the event begins. pic.twitter.com/8q8lNLGth9
— ANI (@ANI) November 8, 2021
Advertisement
ಪ್ರಶಸ್ತಿ: 2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್-ಐಬಿಎನ್ ರಿಯಲ್ ಹೀರೋ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.
ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.