ಡೆಹ್ರಾಡೂನ್: ಉತ್ತರಾಖಂಡದ ಹರಿದ್ವಾರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ತಮ್ಮ ಬೀಳ್ಕೊಡುಗೆ ಸಮಾರಂಭದ ವೇಳೆ ಅಪಾಯಕಾರಿ ಕಾರ್ ಸ್ಟಂಟ್‌ಗಳನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಗುಂಡು ಹಾರಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಹರಿದ್ವಾರ ಸಮೀಪದ ಬಿಎಚ್‌ಇಎಲ್ ಸ್ಟೇಡಿಯಂ ಬಳಿ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿರುವ ವಿಡಿಯೋದಲ್ಲಿ ಸುಮಾರು 70 ವಿದ್ಯಾರ್ಥಿಗಳು ಕಾಣಿಸಿಕೊಂಡಿದ್ದಾರೆ. ಈ ವೇಳೆ ಕೆಲವರು ಕಾರನ್ನು ವೇಗವಾಗಿ ಚಲಾಯಿಸಿ ಪುಂಡಾಟ ಮೆರೆದಿದ್ದಾರೆ. ಕೆಲವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕೆಲವು ವಿದ್ಯಾರ್ಥಿಗಳು ವಿಡಿಯೋ ರೆಕಾರ್ಡ್ ಮಾಡಲು ಚಲಿಸುವ ಕಾರಿನ ಮೇಲೆ ನಿಂತಿರುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದಾಗಿದೆ.
ವೈರಲ್ ಆಗಿರುವ ವಿಡಿಯೋವನ್ನು ಆಧರಿಸಿ ವಿದ್ಯಾರ್ಥಿಗಳನ್ನು ಗುರುತಿಸಲು ಪೋಲಿಸರು ಕ್ರಮಕೈಗೊಂಡಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 223,125 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.