ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರದಿಂದ ತತ್ತರಿಸಿದ ಪ್ರದೇಶಗಳಾದ ಸಕಲೇಶಪುರ ಮತ್ತು ಬೇಲೂರು ಸೇರಿದಂತೆ ಹಾನಿಯಾದ ಪ್ರದೇಶಗಳಿಗೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಸಕಲೇಶಪುರದಲ್ಲಿ ಸಂತ್ರಸ್ಥರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ, ಗಂಜಿಕೇಂದ್ರ ತೆರೆದು ಆಹಾರ ಪೂರೈಕೆ ಮಾಡಲಾಗುತ್ತದೆ. ನಾಳೆ ಡಿಸಿ ನೇತೃತ್ವದಲ್ಲಿ ಜಿಲ್ಲೆಯಾ ಎಲ್ಲಾ ಜನಪ್ರತಿನಿಧಿಗಳ ಜೊತೆ ಸಭೆ ಮಾಡುತ್ತೇನೆ ಎಂದು ಹೇಳಿದರು.
ನಾಳೆಯ ಸಭೆಯಲ್ಲಿ ಮಳೆ ನಷ್ಟದ ಮಾಹಿತಿ ಪಡೆದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ನೀಡುತ್ತೇನೆ. ಶೀಘ್ರ ವಿಶೇಷ ಆದ್ಯತೆ ಮೇರೆಗೆ ಹಣ ಬಿಡುಗಡೆಗೆ ಒತ್ತಾಯ ಮಾಡುತ್ತೇನೆ. ಪರಿಹಾರ ಬಿಡುಗಡೆ ಸಂಬಂಧ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುತ್ತಿದ್ದ ಬಿಜೆಪಿಯವರು ಈಗ ಏನು ಮಾಡುತ್ತಿದ್ದಾರೆ. ಅತಿವೃಷ್ಟಿಯ ಬಗ್ಗೆ ಏಕೆ ಗಮನ ಹರಿಸಿಲ್ಲ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. ಇದೇ ವೇಳೆ ಸಿಎಂ ಯಡಿಯೂರಪ್ಪ ಕೂಡಲೇ ಮಳೆಯಿಂದ ಹಾನಿಯಾದ ಜಿಲ್ಲೆಗಳಿಗೆ ಭೇಟಿ ನೀಡುವಂತೆ ಒತ್ತಾಯ ಮಾಡಿದರು.
ಅವರ ರಾಜಕೀಯ ಏನೇ ಇರಲಿ, ಆ ಬಗ್ಗೆ ನಾನು ಮಾತನಾಡಲ್ಲ. ನಮ್ಮ ಮೈತ್ರಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಅವರು ಈಗ ಮಂತ್ರಿ ಮಂಡಲ ರಚನೆ ಮಾಡಲು ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು.