ಬೆಳಗಾವಿ/ಬೆಂಗಳೂರು: ಇಂದು (ಡಿ.10) ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ.
ಡಿ.4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿತ್ತು.ಇದನ್ನೂ ಓದಿ: ದ್ವೇಷ ಭಾಷಣ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ
ವಿಧೇಯಕದಲ್ಲೇನಿದೆ?
- ದ್ವೇಷ ಭಾಷಣವು ಗಂಭೀರ ಅಪರಾಧ ಎಂದು ಸುಪ್ರಿಂಕೋರ್ಟ್ ಇತ್ತೀಚೆಗಷ್ಟೇ ವ್ಯಾಖ್ಯಾನಿಸಿತ್ತು.
- ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವುದು ಅಪರಾಧ
- ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲು ಅವಕಾಶ ಅಥವಾ 5 ಸಾವಿರ ರೂಪಾಯಿವರೆಗೆ ದಂಡ
- ಮೂರು ವರ್ಷ ಶಿಕ್ಷೆ, 5 ಸಾವಿರ ದಂಡ ಎರಡನ್ನೂ ವಿಧಿಸಲು ಅವಕಾಶ
- ದ್ವೇಷ ಭಾಷಣವನ್ನು ಉತ್ತೇಜಿಸುವಂತೆ ಉದ್ದೇಶಪೂರ್ವಕವಾಗಿ ಪ್ರಕಟಿಸುವವರು, ಪ್ರಚಾರ ಮಾಡುವವರು, ಸಮರ್ಥಿಸುವವರನ್ನ ಶಿಕೆಗೆ ಗುರಿಪಡಿಸಲು ಅವಕಾಶ
- ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಇದರಲ್ಲಿ ಒಳಗೊಂಡಿದೆ
- ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂಗಳು ಸಾಫ್ಟ್ವೇರ್ ಮತ್ತು ಡೇಟಾಬೇಸ್‌ಗಳು ಅಥವಾ ಮೈಕ್ರೋಫಿಲ್ಡ್ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದ ವ್ಯಾಪ್ತಿಗೆ ಒಳಪಡಿಸುವ ಸಾಧ್ಯತೆ ಇದೆ
- ದ್ವೇಷ ಭಾಷಣ ಪ್ರಸಾರ ಮಾಡುವ ವಾಹಿನಿಗಳು (ಚಾನೆಲ್‌ಗಳು), ಟೆಲಿಕಾಂ ಸೇವಾ ಪೂರೈಕೆದಾರರು, ನೆಟ್ವರ್ಕ್ ಸೇವಾ ಪೂರೈಕೆದಾರರು, ಇಂಟರ್ನೆಟ್ ಸೇವಾ ಪೂರೈಕೆದಾರರು, ವೆಬ್‌ಹೋಸ್ಟಿಂಗ್ ಸೇವಾ ಪೂರೈಕೆದಾರರು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್ ಇಂಜಿನ್‌ಗಳು ಆನ್‌ಲೈನ್ ಪಾವತಿ ಸೈಟ್‌ಗಳು, ಆನ್‌ಲೈನ್ ಹರಾಜು ಸೈಟ್‌ಗಳು, ಆನ್‌ಲೈನ್-ಮಾರುಕಟ್ಟೆಗಳು ಮತ್ತು ಸೈಬರ್ ಕೆಫೆಗಳನ್ನೂ ಇದರ ವ್ಯಾಪ್ತಿಗೆ ಸೇರಿಸುವ ಸಾಧ್ಯತೆ ಇದೆ
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ ಬಯಲುಸೀಮೆ ತಿದ್ದುಪಡಿ ವಿಧೇಯಕ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಧಾರ್ಮಿಕ ದತ್ತಿ ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕ, ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿತ್ತು.ಇದನ್ನೂ ಓದಿ: ದ್ವೇಷ ಭಾಷಣ ಮಸೂದೆಗೆ ಇಂದೇ ಒಪ್ಪಿಗೆ ಪಡೆಯುತ್ತೇವೆ – ಪರಮೇಶ್ವರ್

