– ರೈತರಿಗೆ ಅಗತ್ಯವಿರುವಷ್ಟು ಪೆಟ್ರೋಲ್, ಡೀಸೆಲ್ ನೀಡಬೇಕು
ಹಾವೇರಿ: ರೈತರ ವಸ್ತುಗಳನ್ನು ಸಾಗಾಣಿಕೆ ಮಾಡಲು ಯಾವುದೇ ನಿರ್ಬಂಧವಿಲ್ಲ. ಕೃಷಿ ಮತ್ತು ಕೃಷಿಗೆ ಪೂರಕವಾದ ಚಟುವಟಿಕೆಗಳಿಗೆ ಸರ್ಕಾರದಿಂದ ನಿರ್ಬಂಧವಿಲ್ಲ. ರೈತರಿಗೆ ಅಗತ್ಯವಿರುವಷ್ಟು ಬಂಕ್‍ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಿತರಣೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಹಾವೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು ಸಭೆ ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಪೊಲೀಸರು ಸಹ ರೈತರಿಗೆ ಯಾವುದೇ ತೊಂದರೆ ಮಾಡದಂತೆ ಸೂಚಿಸಿದರು. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಬಾರದು ಅಧಿಕಾರಿಗಳ ಜೊತೆಗೆ ನಾವಿದ್ದೇವೆ ಎಂದರು.
ಒಂದು ವೇಳೆ ಕಳಪೆ ಬಿತ್ತನೆ ಬೀಜದಿಂದ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅದು ಆತ್ಮಹತ್ಯೆ ಅಲ್ಲ ಅವರ ಕೊಲೆ ಮಾಡಿದಂತೆ. ಹೀಗಾಗಿ ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಲಾಕ್‍ಡೌನ್‍ನಿಂದ ಹೂವಿನ ಮಾರುಕಟ್ಟೆಗೂ ತೊಂದರೆ ಆಗಿರುವುದು ನಿಜ. ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ವರದಿ ಕೊಡಲು ಸಿಎಂ ಸೂಚಿಸಿದ್ದಾರೆ. ವರದಿ ನಂತರ ಸೂಕ್ತ ಪರಿಹಾರ ವಿತರಣೆ ಮಾಡಲಾಗುವುದು. ಇದರ ಜೊತೆಗೆ ಬಿತ್ತನೆ ಬೀಜ, ರಸಗೊಬ್ಬರವನ್ನು ಎಂ.ಆರ್.ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಪಾಟೀಲ್ ಹೇಳಿದರು.