ಹಾವೇರಿ: ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಕಂಗಾಲಾಗಿರುವ ಹಾವೇರಿ ಜಿಲ್ಲೆಯಲ್ಲಿ, (Haveri) ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ 20ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ಗಳಲ್ಲಿ (Varada River) ಗೇಟ್ ಅಳವಡಿಸಿ ನೀರು ನಿಲ್ಲಿಸುವಂತೆ ರೈತರು ಒತ್ತಾಯಿಸಿದ್ದಾರೆ.
ಹಾವೇರಿ ಕೃಷಿ ಪ್ರಧಾನ ಜಿಲ್ಲೆ. ಆದರೆ ಪ್ರಸಕ್ತ ವರ್ಷ ಮಳೆರಾಯನ ಮುನಿಸಿನಿಂದ ಅನ್ನದಾತರು ಕಂಗಾಲಾಗಿದ್ದಾರೆ. ಒಂದು ಕಡೆ ಮಳೆ ಕೊರತೆ, ಮತ್ತೊಂದೆಡೆ ಇದ್ದ ನೀರನ್ನು ಸರಿಯಾಗಿ ನಿಲ್ಲಿಸಲು ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲೆಯ ಜೀವನಾಡಿ ನದಿಗಳಾದ ವರದಾ ಮತ್ತು ತುಂಗಭದ್ರಾ ನದಿಗಳಲ್ಲಿ ಈ ಬಾರಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 20ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿವೆ. ಆದರೆ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ವರದಾ ನದಿಯಲ್ಲೂ ನೀರಿನ ಮಟ್ಟ ಇಳಿಕೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದ್ದರೂ, ಇದೀಗ ಹಾವೇರಿ ಜಿಲ್ಲೆಯ ವರದಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಇಲಾಖೆ ಬ್ರಿಡ್ಜ್ ಕಂ ಬ್ಯಾರೇಜ್‌ಗಳ ಗೇಟ್‌ಗಳನ್ನು ಅಳವಡಿಸಿ ನೀರು ನಿಲ್ಲಿಸಬೇಕು. ಜೊತೆಗೆ ಸುತ್ತಮುತ್ತಲಿನ ಕೆರೆಗಳನ್ನು ತುಂಬಿಸುವ ಕೆಲಸ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಶೇ.50ರಷ್ಟು ಕಡಿಮೆಯಾಗಿದೆ. ಈ ಕುರಿತು ಜಿಲ್ಲಾಡಳಿತ ಹಾಗೂ ಸಚಿವರು ಎರಡು-ಮೂರು ಬಾರಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಆದರೂ ಅಧಿಕಾರಿಗಳು ಕೆರೆಗಳನ್ನು ತುಂಬಿಸುವ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.ಇದನ್ನೂ ಓದಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ
ಇದೀಗ ಮಲೆನಾಡು ಭಾಗದಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ವರದಾ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ಹೀಗಾಗಿ 20ಕ್ಕೂ ಅಧಿಕ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಗೇಟ್ ಅಳವಡಿಸಿ ನೀರು ನಿಲ್ಲಿಸುವ ಕೆಲಸ ಮಾಡಬೇಕು. ಇದರಿಂದ ಚಳಿಗಾಲ ಮತ್ತು ಬೇಸಿಗೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಹಿಂಗಾರು ಬೆಳೆ ಬೆಳೆಯುವ ರೈತರಿಗೆ ಅನುಕೂಲವಾಗಲಿದೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ರೈತರು ಒತ್ತಾಯಿಸಿದ್ದಾರೆ.
ಒಟ್ನಲ್ಲಿ, ಹಾವೇರಿ ಜಿಲ್ಲೆಯ ರೈತರಿಗೆ ಮಳೆರಾಯನ ಅವಕೃಪೆಯಿಂದ ಬೆಳೆದ ಬೆಳೆಗಳು ಸರಿಯಾಗಿ ಫಸಲು ನೀಡಿಲ್ಲ. ಇದೀಗ ವರದಾ ನದಿಯಲ್ಲಿರುವ ನೀರನ್ನು ನಿಲ್ಲಿಸಿ, ಬೇಸಿಗೆಯಲ್ಲಿ ಜಾನುವಾರುಗಳಿಗೆ ಹಾಗೂ ಜನರಿಗೆ ಕುಡಿಯುವ ನೀರು ಒದಗಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕಿದೆ.ಇದನ್ನೂ ಓದಿ: ರೈತರು ಈ ವರ್ಷ ಅರೆ ಬೆಳೆ ಬೆಳೆಯುವ ಕೆಲಸ ಮಾಡಬೇಕು: ಕೃಷಿ ಸಚಿವ ಮನವಿ
