ಬೆಂಗಳೂರು: 37 ಜನ ಶಾಸಕರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತದೆಯೇ ಎಂದು ಮಾಜಿ ಪ್ರದಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‍ಡಿ ದೇವೇಗೌಡ ಹೇಳಿದ್ದಾರೆ.
ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪೂರ್ಣ ಸಾಲಮನ್ನಾ ನಿರ್ಧಾರ ಕೈಗೊಳ್ಳಲು ನಮಗೆ ಪೂರ್ಣ ಬಹುಮತ ಸಿಕ್ಕಿಲ್ಲ. ಹೀಗಾಗಿ ಈ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚೆ ನಡೆಯಬೇಕು ಎಂದರು.
Advertisement
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿಯಲ್ಲಿ ಇದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ಸಲಹೆ ನೀಡಿರುವೆ. ನಾವು ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಬರದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
Advertisement
Advertisement
ನಗರಕ್ಕೆ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಬಂದಿದ್ದಾರೆ. ತೃತೀಯ ರಂಗದ ನಿರ್ಧಾರಗಳ ಕುರಿತು ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ನಾನು ಪಕ್ಷದ ಅಧ್ಯಕ್ಷ ಎನ್ನುವುದಕ್ಕಿಂತ ಹೆಚ್ಚಾಗಿ ತಂದೆಯಾಗಿ ಆರ್ಶೀವಾದ ಮಾಡಿರುವೆ. ಇದು ನಮ್ಮ ಕರ್ತವ್ಯ ಎಂದರು.
Advertisement
ಅಮೋಘ ನಿವಾಸದಲ್ಲಿ ಸಂಭ್ರಮ:
ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪದ್ಮನಾಭನಗರದ ಅಮೋಘ ನಿವಾಸದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಮನೆಯ ಮುಂಭಾಗವು ಹೂವಿನ ಅಲಂಕಾರದಿಂದ ಸಿಂಗಾರಗೊಂಡಿದೆ. ದೇವೇಗೌಡರ ಪತ್ನಿ ಚೆನ್ನಮ್ಮ ಹಾಗೂ ಸಹೋದರಿ ಮನೆಯ ಮುಂದಿನ ತುಳಸಿ ಪೂಜೆ ಮಾಡಿದ್ದು, ಬೆಳಗ್ಗೆಯಿಂದಲೇ ಕುಟುಂಬಸ್ಥರು ವಿವಿಧ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದಾರೆ.
ನಿವಾಸದ ಸುತ್ತಮುತ್ತ ರಸ್ತೆಗಳಲ್ಲಿ ಫ್ಲೆಕ್ಸ್ ಗಳನ್ನು ಹಾಕಲಾಗಿದೆ. ಮಂಗಳವಾರ ರಾತ್ರಿ ಬಂದಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರೊಂದಿಗೆ ತಡರಾತ್ರಿಯವರೆಗೆ ದೇವೇಗೌಡರು ಸಮಾಲೋಚನೆಯಲ್ಲಿ ತೊಡಗಿದ್ದರು. ಸದ್ಯ ಅವರ ನಿವಾಸಕ್ಕೆ ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿದೆ.