ಬೆಂಗಳೂರು: ತೀರ್ಪಿನಿಂದ ಯಡಿಯೂರಪ್ಪಗೆ ಯಾವುದೇ ಆತಂಕ ಇಲ್ಲ. ಯಡಿಯೂರಪ್ಪ ಮೂರೂವರೆ ವರ್ಷ ಸೇಫ್ ಆಗಿರುತ್ತಾರೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಹಳೆಯ ಸ್ಪೀಕರ್ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸುತ್ತಾರೆ. ಇದರರ್ಥ ಏನೂ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಎಚ್ಡಿಡಿ ತಿವಿದರು.
Advertisement
Advertisement
ನಾವು ಮತ್ತೆ ಕಾಂಗ್ರೆಸ್ ಜೊತೆ ದೋಸ್ತಿ ಮಾಡುವುದಿಲ್ಲ. ಉಳಿದ ಮೂರೂವರೆ ವರ್ಷ ಪಕ್ಷ ಸಂಘಟನೆ ಮಾಡುತ್ತೇವೆ. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕುಮಾರಸ್ವಾಮಿ ಮಾತನಾಡುತ್ತಾರೆ. 17 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಕುಮಾರಸ್ವಾಮಿಯವರೇ ಹೇಳಿದ್ದಾರೆ. ಅದರ ಬಗ್ಗೆ ಎಚ್ಡಿಕೆ ತೀರ್ಮಾನ ಮಾಡುತ್ತಾರೆ. ಆದರೆ 17 ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ದೇವೇಗೌಡರು ಹೇಳಿದರು.
Advertisement
ಉಪ ಚುನಾವಣೆಯಲ್ಲಿ 17 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಗೆದ್ದರೂ ಅವರಿಗೆ ಸಚಿವರನ್ನಾಗಿ ಮಾಡುವ ಹಾಗಿಲ್ಲ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಕೊಡುವ ಹಾಗಿಲ್ಲ, ಕೇವಲ ಶಾಸಕರಾಗಿ ಇರಬಹುದು. ಆಗ ಮೂಲ ಬಿಜೆಪಿಗರನ್ನೇ 27 ಜನರನ್ನು ಮಂತ್ರಿಗಳನ್ನಾಗಿ ಮಾಡಬಹುದು. 104 ಶಾಸಕರಲ್ಲಿ 50 ಜನರನ್ನು ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ಮಾಡಬಹುದು. ಹೀಗಾಗಿ ಯಡಿಯೂರಪ್ಪನವರು ಮೂರು ವರ್ಷ ಸೇಫ್ ಆಗಿ ಆಡಳಿತ ನಡೆಸಬಹುದು ಎಂದು ವಿವರಿಸಿದರು.
Advertisement
ಸುಪ್ರೀಂ ಆದೇಶದಲ್ಲಿ ಏನಿದೆ?
ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಿದೆ. ಆದರೆ ವಿಧಾನಸಭೆಯ ಅವಧಿ ಮುಗಿಯುವವರೆಗೂ ಅನರ್ಹತೆ ಮಾಡಲು ಸಾಧ್ಯವಿಲ್ಲ. ಅನರ್ಹತೆಯಾದ ಪರಿಣಾಮ ಈಗ ಅವರು ಯಾವುದೇ ಸಾಂವಿಧಾನಿಕ ಹುದ್ದೆಯನ್ನು ಪಡೆಯುವ ಅರ್ಹತೆ ಹೊಂದಿಲ್ಲ. ಈ ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ.
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿ.5 ರಂದು ಮತದಾನ ನಡೆಯಲಿದ್ದು ಡಿ.9 ಸೋಮವಾರದಂದು ಫಲಿತಾಂಶ ಪ್ರಕಟವಾಗಲಿದೆ. ತೆರವಾದ ಕ್ಷೇತ್ರಗಳಿಗೆ 6 ತಿಂಗಳ ಒಳಗಡೆ ಚುನಾವಣೆ ನಡೆಸಬೇಕಾಗುತ್ತದೆ.