– ರೈತರಿಗೆ ಹೆಚ್ಚುವರಿ ಸಿಗಲಿದೆ 300 ರೂ.
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನಡೆಸಿದ ಸಂಧಾನ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಮುಂದಿಟ್ಟ 50:50 ಸೂತ್ರಕ್ಕೆ ಮಾಲೀಕರು ಒಪ್ಪಿಕೊಂಡಿದ್ದಾರೆ. ಈ ಮೂಲಕ ಕಬ್ಬು ಬೆಳೆದು ಕಣ್ಣೀರು ಸುರಿಸಿದ್ದ ರೈತರ ಕಣ್ಣೀರನ್ನು ಒರೆಸಲು ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.
ಸಂಧಾನ ಸಭೆಯ ನಿರ್ಣಯ:
ನ್ಯಾಯ ಹಾಗೂ ಲಾಭದಾಯಕ ಬೆಲೆಗಿಂತ (ಎಫ್.ಆರ್.ಪಿ) ಹೆಚ್ಚಿನ ಮೊತ್ತ ನೀಡುವ ಪ್ರಸ್ತಾವನೆಗೆ ಮಾಲೀಕರಿಂದ ವಿರೋಧ ವ್ಯಕ್ತವಾಯಿತು. ಬಳಿಕ ಎಫ್.ಆರ್.ಪಿ ದರವನ್ನು ಕೊಡುವುದಕ್ಕೆ ಒಪ್ಪಿಕೊಂಡರು. ಈಗ ಎಫ್.ಆರ್.ಪಿ ದರ 2,750 ರೂ. ಇದೆ. ಉಳಿದಂತೆ ಮಾಲೀಕರಿಂದ 150 ರೂ., ಸರ್ಕಾರದಿಂದ 150 ರೂ. ಸೇರಿ ಒಟ್ಟು 300 ರೂ. ಪ್ರೋತ್ಸಾಹಧನವಾಗಿ ನೀಡಲು ಸಭೆ ನಿರ್ಧಾರ ಕೈಗೊಳ್ಳಲಾಯಿತು. ಈ ಮೂಲಕ ರೈತರು ಪ್ರತಿ ಟನ್ ಕಬ್ಬಿಗೆ 3,050 ರೂ. ಪಡೆಯಲಿದ್ದಾರೆ.
Advertisement
Advertisement
ಹೆಚ್ಚು ಬಾಕಿ ಉಳಿಸಿಕೊಂಡಿರುವ ಬಾಗಲಕೋಟೆ, ವಿಜಯಪುರ ಕಾರ್ಖಾನೆ ಮಾಲೀಕರು ಮುರುಗೇಶ್ ನಿರಾಣಿ, ಆನಂದ್ ನ್ಯಾಮಗೌಡ, ಎಸ್.ಆರ್ ಪಾಟೀಲ ಅವರು ತಕ್ಷಣ ಬಾಕಿ ಬಿಲ್ ಪಾವತಿ ಮಾಡಬೇಕು ಎಂದು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಾಲೀಕರು, ತಕ್ಷಣ ಪಾವತಿ ಕಷ್ಟ, ಹಂಗಾಮು ಒಳಗೆ ಕೊಡುತ್ತೇವೆ ಎಂದು ಭರವಸೆ ನೀಡಿದರು. ಇತ್ತ ಬೆಳಗಾವಿ ಸಕ್ಕರೆ ಕಾರ್ಖಾನೆ ಮಾಲೀಕರು 15 ದಿನ ಗಡುವು ಕೇಳಿದ್ದಾರೆ.
Advertisement
ಬರೀ ರೈತರ ವಾದ ಕೇಳಿದರೆ ನಮ್ಮದೂ ಸಮಸ್ಯೆ ಇದೆ. ಅದನ್ನು ಸ್ವಲ್ಪ ಕೇಳಿ ಎಂದು ಮಾಲೀಕರು ತಮ್ಮ ವಾದವನ್ನು ಸಿಎಂ ಕುಮಾರಸ್ವಾಮಿ ಅವರ ಮುಂದೆ ಮಂಡಿಸಿದ್ದಾರೆ.
Advertisement
ಸಕ್ಕರೆ ಸಾಹುಕಾರರ ವಾದವೇನು?: ಎಫ್.ಆರ್.ಪಿ ದರದಲ್ಲಿ ಒಪ್ಪಂದ ಮಾಡಿಕೊಂಡಾಗ ಸಕ್ಕರೆ ದರ ಕೆಜಿಗೆ 35 ರಷ್ಟಿತ್ತು, ಈಗ 27ಕ್ಕೆ ಇಳಿದಿದೆ. ಟನ್‍ಗೆ 2,900 ರೂ. ಒಪ್ಪಂದ ಆಗಿದ್ದೂ ಲಾಭ ಬಂದ ಸಂದರ್ಭದಲ್ಲಿ 3,400 ರೂ. ನೀಡಿದ್ದೇವೆ. ಕಂಪೆನಿಗಳಿಂದ ವಿದ್ಯುತ್ ಖರೀದಿಯಲ್ಲಿ ಸರ್ಕಾರ ಮೋಸ ಮಾಡಿದೆ. ಪ್ರತಿ ಯೂನಿಟ್‍ಗೆ 5.87 ರೂ. ಒಪ್ಪಂದ ಮಾಡಿಕೊಂಡಿತ್ತು, ಈಗ 3.87 ರೂ. ನೀಡುತ್ತಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶಗಳ ಕಾರ್ಖಾನೆಗಳು ಉತ್ತಮ ದರದಲ್ಲಿ ವಿದ್ಯುತ್ ಖರೀದಿಸುತ್ತಿವೆ ಎಂದು ಹೇಳಿದ್ದಾರೆ.
ಬರಗಾಲದಿಂದ ಕೇವಲ 8ರಿಂದ 10 ಲಕ್ಷ ಟನ್ ಕಬ್ಬು ಅರೆಯುತ್ತಿದ್ದೇವೆ. ಇದಕ್ಕೂ ಮೊದಲು 30 ರಿಂದ 40 ಲಕ್ಷ ಟನ್ ಕಬ್ಬು ಅರೆಯಲಾಗುತ್ತಿತ್ತು. ಇಥೆನಾಲ್‍ಗೆ ಕೇಂದ್ರ ಸರ್ಕಾರ ಸಬ್ಸಿಡಿ ಕೊಟ್ಟಿದೆ. ರಾಜ್ಯದಿಂದ ಯಾವುದೇ ಪ್ರೋತ್ಸಾಹ ಇಲ್ಲ. ನೆರೆ ರಾಜ್ಯಗಳು ಬಡ್ಡಿ ರಹಿತ ಸಾಲ ನೀಡಿ ಸಹಾಯಕ್ಕೆ ಬಂದಿವೆ, ರಾಜ್ಯದಲ್ಲಿ ಏನೂ ಆಗಿಲ್ಲ. 6-8 ತಿಂಗಳಾದ್ರೂ ಕಾರ್ಖಾನೆ ಖರೀದಿಸಿದ ವಿದ್ಯುತ್‍ಗೆ ಸರ್ಕಾರ ಹಣ ಪಾವತಿಸಿಲ್ಲ. 15 ದಿನದೊಳಗೆ ಪಾವತಿಸಿ ಅಂದರೆ ಹೇಗೆ? ಸರ್ಕಾರವೂ ಬಾಕಿಯನ್ನು 15 ದಿನದಲ್ಲಿ ಪಾವತಿಸಲಿ. 10 ತಿಂಗಳಾದರೂ ಹೈಲೆವೆಲ್ ಕಮಿಟಿ ಸಭೆ ನಡೆಸಿಲ್ಲ. ಕಾರ್ಖಾನೆಗಳಿಗೆ ಬೇಕಾದ ಕ್ಲಿಯರೆನ್ಸ್ ಸಿಕ್ಕಿಲ್ಲ ಎಂದು ಮಾಲೀಕರು ಸಿಎಂಗೆ ತಿಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಕ್ಕರೆ ಕಾರ್ಖಾನೆ ಮಾಲೀಕ ಬಾಲಚಂದ್ರ ಜಾರಕಿಹೊಳಿ, ಮೇಜರ್ ಸಮಸ್ಯೆ ಬಾಗಲಕೋಟೆಯದ್ದು. ನಾವು ಎಫ್.ಆರ್.ಪಿಗಿಂತ ಹೆಚ್ಚು ದರ ಕೊಟ್ಟಿದ್ದೇವೆ. ನಮ್ಮದು ಸಮಸ್ಯೆ ಇಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕೆಲವರು ಬಾಕಿ ಪಾವತಿಗೆ ಸಮಯ ಕೇಳಿದ್ದಾರೆ. ಎಲ್ಲ ಸರಿ ಹೋಗುತ್ತೆ ಅಂದ್ರು. ಆದರೆ ಸಭೆಯಲ್ಲಿ ನಡೆದ ಚರ್ಚೆ ವಿಷಯದಲ್ಲಿ ಗೊಂದಲವಿದೆ. ಕಬ್ಬಿನ ದರ ಹಾಗೂ ಬಾಕಿ ವಿಚಾರದಲ್ಲಿ ಸ್ಪಷ್ಟತೆಯಿಲ್ಲ. ಹೀಗಾಗಿ ಅಹೋರಾತ್ರಿ ಧರಣಿ, ಆಮರಣ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಬೆಳಗಾವಿಯಲ್ಲಿ ರೈತ ಸಂಘದ ಮುಖಂಡ ಚೂನಪ್ಪ ಪೂಜಾರಿ ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಶಾಸಕರಾಗಿರುವ ಸತೀಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಎಸ್.ಆರ್.ಪಾಟೀಲ್, ಶ್ರೀಮಂತ ಪಾಟೀಲ್, ಶಶಿಕಲಾ ಜೊಲ್ಲೆ, ಆನಂದ ನ್ಯಾಮಗೌಡ ಹಾಜರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv