ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲೂ (Vidhan Parishad Election) ಕಾಂಗ್ರೆಸ್ ಉಡುಗೊರೆಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ. ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದರು.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್-ಬಿಜೆಪಿ (BJP JDS Alliance) ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ
ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್ ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್‌ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ (Congress Party) ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಈ ಷಡ್ಯಂತ್ರವನ್ನು ಒಗ್ಗಟ್ಟಿನಿಂದ ಎದುರಿಸಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ಚನ್ನಗಿರಿ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ: ಪರಮೇಶ್ವರ್
ಜೆಡಿಎಸ್ -ಬಿಜೆಪಿ ಮೈತ್ರಿ ಐತಿಹಾಸಿಕ. ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ದೇವೇಗೌಡರ (HD Devegowda) ನೇತೃತ್ವದಲ್ಲಿ ಆಗಿರುವ ಈ ಮೈತ್ರಿಯನ್ನು ಎರಡೂ ಪಕ್ಷಗಳ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುತ್ತದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಕಿರಿ ಕಾರಿದರು.