ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಿಸಲಾಗಿದ್ದು, ಚಿಕ್ಕಮಗಳೂರಿನ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಒಂದೆಡೆ ಪ್ರವಾಹ, ಇನ್ನೊಂದೆಡೆ ಮಳೆ ಹೆಚ್ಚುತ್ತಲೇ ಇದ್ದು, ಪರಿಹಾರ ಕಾರ್ಯ ಸವಾಲಾಗಿ ಪರಿಣಮಿಸಿದೆ. ಕೆಲವೆಡೆ ಗಂಜಿ ಕೇಂದ್ರಗಳಿಗೇ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
Advertisement
Advertisement
ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಸಾವಿರಾರು ಮನೆಗಳಿಗೆ ನೀರು ನುಗ್ಗಿದೆ. ಘಟಪ್ರಭಾ, ಮಲಪ್ರಭಾ, ಕೃಷ್ಣಾ ನದಿಗಳು ತುಂಬಿ ಹರಿಯುತ್ತಿವೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಬಾಗಲಕೋಟೆ ಜಿಲ್ಲೆಯಾದ್ಯಂತ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.
Advertisement
ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ತ್ರಿವಳಿ ನದಿಗಳ ಪ್ರವಾಹಕ್ಕೆ ತುತ್ತಾಗಿ ಸುಮಾರು 30 ಕ್ಕೂ ಅಧಿಕ ಗ್ರಾಮಗಳು ಜಲಾವೃತಗೊಂಡಿವೆ. ಈ ಹಿನ್ನಲೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಿರಲಿ ಎಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
Advertisement
ಉಡುಪಿ: ವರುಣನ ಆರ್ಭಟ ಒಂದು ಕಡೆಯಾದರೆ, ಭೂ ಕುಸಿತದ ಭೀತಿ ಇನ್ನೊಂದೆಡೆಯಾಗಿದೆ. ಕರಾವಳಿ ಭಾಗದ ಬಹುತೇಕ ರಸ್ತೆಗಳಲ್ಲಿ ಭೂ ಕುಸಿತ ಉಂಟಾಗಿ ರಸ್ತೆಗಳು ಬಂದ್ ಆಗಿವೆ, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆಗಸ್ಟ್ 9ರಂದು ಸಹ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಉತ್ತರ ಕನ್ನಡ: ಜಿಲ್ಲೆಯಲ್ಲಿ ಸಹ ಅದೇ ಪರಿಸ್ಥಿತಿ ಮುಂದುವರಿದಿದ್ದು, ಮಳೆ, ಪ್ರವಾಹ ನಿರಂತರವಾಗಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ಶುಕ್ರವಾರವೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆ 5 ತಾಲೂಕಿನ ಶಾಲಾ-ಕಾಲೇಜಿಗೆ ಶುಕ್ರವಾರವೂ ಸಹ ರಜೆಯನ್ನು ಮುಂದುವರಿಸಲಾಗಿದೆ. ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಅಪರ ಜಿಲ್ಲಾಧಿಕಾರಿ ಕುಮಾರ್ ಆದೇಶ ಹೊರಡಿಸಿದ್ದಾರೆ.