ಉಡುಪಿ: ಜಿಲ್ಲೆಯಲ್ಲಿ ಐದನೇ ದಿನವೂ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸುತ್ತೋಲೆ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಿಂದ ಇಲಾಖೆ ಮೂಲಕ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮಾಹಿತಿ ರವಾನೆ ಮಾಡಿದ್ದಾರೆ. ಮಳೆಯ ಕಾರಣಕ್ಕೆ ಮಂಗಳವಾರ ಒಂದು ದಿನ ರಜೆ ನೀಡಲಾಗಿತ್ತು. ಹವಾಮಾನ ಇಲಾಖೆಯು ಬುಧವಾರವೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ನದಿ ತಟದ ಗ್ರಾಮಗಳಿಗೂ ಮಾಹಿತಿ ರವಾನೆ ಮಾಡಲಾಗಿದ್ದು, ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಮೀನುಗಾರರಿಗೂ ಎಚ್ಚರಿಕೆ ಸಂದೇಶ ರವಾನೆ ಮಾಡಿದ್ದಾರೆ. ಕಸುಬಿಗಾಗಿ ಕಡಲಿಗಿಳಿಯದಂತೆ ಮೀನುಗಾರಿಕಾ ಇಲಾಖೆ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ ಮಳೆಯಿಂದ ಕಾಲುವೆಗಳು ಉಕ್ಕಿ ಹರಿಯುತ್ತಿದ್ದು, ರಸ್ತೆಗಳಲ್ಲಿಯೂ ನೀರು ತುಂಬಿಕೊಂಡಿದೆ. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆಯಲ್ಲಿ ಕಷ್ಟಪಟ್ಟು ಸಂಚರಿಸುತ್ತಿದ್ದಾರೆ.
24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತಿ ಹೆಚ್ಚು ದಾಖಲಾಗಿದ್ದು, 155 ಮಿಲಿಮೀಟರ್ ಮಳೆ ಸುರಿದಿದೆ. ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದೆ.