ಬೆಂಗಳೂರು: ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಕಂಗೆಟ್ಟದ್ದ ಜನತೆ ಎರಡು ದಿನಗಳ ಕಾಲ ಮಳೆ ಕಡಿಮೆಯಾಗಿದ್ದನ್ನು ಕಂಡು ನಿರಾಳರಾಗಿದ್ದರು. ಇದೀಗ ಮತ್ತೆ ಸಂಕಷ್ಟ ಎದುರಾಗಿದ್ದು, ಇಂದು ರಾತ್ರಿ ಮತ್ತೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು, ಕರಾವಳಿ ಭಾಗದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನೆಲೆ ಗುಡ್ಡ ಕುಸಿತ ಎದುರಾಗುತ್ತದೆ ಹೀಗಾಗಿ ಬೆಟ್ಟ, ಗುಡ್ಡಗಳ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.
Advertisement
Advertisement
ಉತ್ತರ ಕರ್ನಾಟಕ ಮೂರು ಜಿಲ್ಲೆಗಳು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಕೊಡಗು ಜಿಲ್ಲೆಯಲ್ಲಿ ಸಹ ನಾಳೆ ಬೆಳಗ್ಗೆಯವರೆಗೆ ರೆಡ್ ಅಲರ್ಟ್, ಗುರುವಾರ ಹಾಗೂ ಶುಕ್ರವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ಹೊರಡಿಸಿದ್ದಾರೆ. ಕೇಂದ್ರ ಹವಾಮಾನ ಇಲಾಖೆ ಮಾಹಿತಿ ಆಧರಿಸಿ ಈ ನಿರ್ಧಾರ ಕೈಗೊಂಡಿದ್ದಾರೆ.
Advertisement
ಕೊಡಗು ಜಿಲ್ಲೆಯಲ್ಲಿ ಇಂದು ರಾತ್ರಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಅತಿಯಾದ ಮಳೆಯಿಂದ ಬ್ರಹ್ಮಗಿರಿ ಬೆಟ್ಟ ಸೇರಿದಂತೆ ಹಲವು ಬೆಟ್ಟಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ಬೆಟ್ಟ, ಗುಡ್ಡ ಪ್ರದೇಶಗಳಲ್ಲಿ ಇಂದು ಹಾಗೂ ನಾಳೆ ಬೆಳಿಗ್ಗೆ ಭೂ ಕುಸಿತ ಉಂಟಾಗುವ ಸಂಭವ ಇದೆ. ಗುಡ್ಡಗಾಡು ಪ್ರದೇಶ, ಮತ್ತು ಬೆಟ್ಟದ ತಪ್ಪಲುಗಳಲ್ಲಿ ವಾಸ ಮಾಡುವ ಜನರು ಜಾಗೃತೆಯಿಂದ ಇರಿ, ಇಲ್ಲವೇ ಸ್ಥಳಾಂತರವಾಗಿ ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಈ ಕುರಿತು ನಿನ್ನೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಆಗಸ್ಟ್ 15ರಿಂದ 19ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯ ಮೇಲೂ ಇದು ಪರಿಣಾಮ ಬೀರುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಐದು ದಿನ ಕರಾವಳಿ ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದರು.
ಪಶ್ಚಿಮಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ದೊರಕಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ 16ರಿಂದ 18ರವರೆಗೆ ಮಳೆಯಾಗಲಿದೆ. ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ತುಮಕೂರು ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆ ಆಗಲಿದೆ. ಹಾಗೆಯೇ ಬೆಂಗಳೂರಿನಲ್ಲಿ ಒಮ್ಮೊಮ್ಮೆ ಹೆಚ್ಚು ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.