ಮಡಿಕೇರಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ (Rain Effect) ಇದೀಗ ಕೊಡಗು ಜಿಲ್ಲೆಯಲ್ಲಿ (Kodagu) ಮತ್ತೆ ಆರ್ಭಟಿಸಿದೆ. ಇಂದು ಮಧ್ಯಾಹ್ನದಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸುಂಟಿಕೊಪ್ಪ, ಮುರ್ನಾಡು ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ.
ಕೂಡಿಗೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ದಿಢೀರ್ ಸುರಿದ ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ರಸ್ತೆಗಳ ಮೇಲೆ ಮಳೆ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಕೆಲವೆಡೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಮಳೆಯ ಅಬ್ಬರಕ್ಕೆ ಕೂಡಿಗೆ ವ್ಯಾಪ್ತಿಯಲ್ಲಿ ಹಲವು ಕಡೆ ಮರಗಳು ಧರೆಗೆ ಉರುಳಿವೆ. ಮರಗಳು ಬಿದ್ದ ಪರಿಣಾಮ ಕೆಲವು ವಿದ್ಯುತ್ ಕಂಬಗಳಿಗೂ ಹಾನಿಯಾಗಿದ್ದು, ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಇನ್ನು ವಿರಾಜಪೇಟೆ, ಮುರ್ನಾಡು, ಸುಂಟಿಕೊಪ್ಪ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಏಕಾಏಕಿ ಗುಡುಗು-ಸಿಡಿಲಿನೊಂದಿಗೆ ಮಳೆ ಸುರಿದಿದ್ದರಿಂದ ಜನರು ಕೆಲಕಾಲ ಆತಂಕಕ್ಕೊಳಗಾದರು. ಇದನ್ನೂ ಓದಿ: ಗುತ್ತಿಗೆದಾರರ ಹಣ ಬಿಡುಗಡೆ ಮಾಡೋದು ತಡ ಆದ್ರೆ ಸಹಿಸಿಕೊಳ್ಳಬೇಕು: ಪ್ರಿಯಾಂಕ್ ಖರ್ಗೆ
ಮತ್ತೊಂದೆಡೆ, ಮಳೆಯ ಆಗಮನ ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿದ್ದ ರೈತರಿಗೆ ಇದೀಗ ಸುರಿಯುತ್ತಿರುವ ಮಳೆ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇನ್ನಷ್ಟು ಮಳೆಯಾಗುವ ನಿರೀಕ್ಷೆಯಿದೆ.ಇದನ್ನೂ ಓದಿ: ಲಾರಿ, KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿ – ಮಗು ಸಾವು, 10 ಮಂದಿಗೆ ಗಾಯ

