ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮತ್ತೆ ಮುಂದುವರಿದಿದೆ. ದೀಪಾವಳಿ ಸಂಭ್ರಮದಲ್ಲಿದ್ದ ಜನತೆಗೆ ಮಳೆರಾಯ ಕೊಂಚ ಬೇಸರ ತರಿಸಿದ್ದಾನೆ. ಈಗಾಗಲೇ ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಲ್ಲದೇ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಅಂದ್ರೆ ಅಕ್ಟೋಬರ್ 21 ರಿಂದ ಅ.29ರ ವರೆಗೆ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಸಂಜೆ ನಂತರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡು ಭಾಗದ ಕೆಲ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಹಾಸನ, ಕೋಲಾರ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.