ಕೋಲಾರ: ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಕೋಲಾರದಲ್ಲಿರುವ ಪ್ರಮುಖ ಚರ್ಚ್, ದೇವಸ್ಥಾನ, ಮಸೀದಿ, ಮಾಲ್, ಲಾಡ್ಜ್, ಸ್ಟಾರ್ ಹೋಟೆಲ್ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು, ಅನುಮಾನಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಜ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ತಮ್ಮ ಕಚೇರಿಯಲ್ಲಿ ಎಲ್ಲಾ ವರ್ಗದ ಜನರು ಹಾಗೂ ಧರ್ಮ ಗುರುಗಳೊಂದಿಗೆ ಸಭೆ ನಡೆಸಿ ತೀವ್ರ ನಿಗಾ ಇಡುವಂತೆ ಆದೇಶ ಹೊರಡಿಸಿದ್ದಾರೆ. ಚರ್ಚ್, ಮದರಸಾ, ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿ ನೀಡುವುದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೇಲ್‍ಗಳು, ಡಾಬಾ, ಲಾಡ್ಜ್‍ಗಳಲ್ಲಿ ಸೆಕ್ಯೂರಿಟಿ ಗಾರ್ಡ್‍ಗಳನ್ನು ನೇಮಿಸುವುದು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.
Advertisement
Advertisement
ಜೊತೆಗೆ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮಾರ್ಕೆಟ್, ಚಿತ್ರಮಂದಿರಗಳು, ಕಲ್ಯಾಣ ಮಂಟಪಗಳಲ್ಲಿ ಹೆಚ್ಚಿನ ಜನಸಂದಣಿ ಸೇರುವ ಸ್ಥಳಗಳಲ್ಲಿ ಸಂಶಯಾಸ್ಪದವಾಗಿ ಕಂಡು ಬರುವ ವ್ಯಕ್ತಿಗಳು, ವಾರಸುದಾರರಿಲ್ಲದ ಲಗೇಜ್ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.